ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗಾಗಿ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕತೆ ಹೆಚ್ಚುತ್ತದೆ ಮತ್ತು ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ. ಜೊತೆಗೆ, 2025-26ರ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಪೌಷ್ಠಿಕತೆಯ ಹೆಚ್ಚಾಳಕ್ಕಾಗಿ ಹಲವಾರು ಯೋಜನೆಗಳಿಗೆ ಅನುದಾನ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಏನಿದೆ?
- ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 94,084 ಕೋಟಿ ರೂ. ಅನುದಾನ.
- ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ಒಟ್ಟು 62,033 ಕೋಟಿ ರೂ. ಅನುದಾನ.
- ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು.
- ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.
- ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ನೆರವು.
- ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲು.
- ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಕ್ಕೆ 5 ಕೋಟಿ ರೂ.
- Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಣೆ.
- ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲು ಕ್ರಮ.
- ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯ 1,000 ರೂ.ನಿಂದ 2,000 ರೂ.ಗೆ ಹೆಚ್ಚಳ.
- ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆ ಮಾಸಿಕ 1,750 ರೂ.ಗಳಿಗೆ ಹೆಚ್ಚಳ.