ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ (ಮಾ.7) ರಾತ್ರಿ ಘಟನೆ ನಡೆದಿದ್ದು, ಶನಿವಾರ ಬೆಳಿಗ್ಗೆ ಗೊತ್ತಾಗಿದೆ ಎನ್ನಲಾಗಿದೆ.
ʼಪ್ರೀತಿಸುವ ವಿಚಾರ ಮನೆಯವರು ಒಪ್ಪುವುದಿಲ್ಲ ಎಂಬ ಭಯದಿಂದ ಗ್ರಾಮದ ಹೊರವಲಯದ ಐನಾಪುರ ರಸ್ತೆಯಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಎಸ್ಸೆಸ್ಸೆಲ್ಸಿ ಓದುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅವರ ಪ್ರೀತಿಗೆ ಕುಟುಂಬದವರು ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆದರೆ ಇಬ್ಬರ ಪ್ರೀತಿಸುವ ವಿಚಾರ ನಮಗೂ ಗೊತ್ತಿರಲಿಲ್ಲ ಎಂದು ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.