ಚಾಮರಾಜನಗರದ ಜಿಲ್ಲಾ ಪಂಚಾಯತ್ ನೂತನ ಕೆಡಿಪಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಸುನಿಲ್ ಬೋಸ್ ಮಾತನಾಡಿ ‘ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಿ ‘ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
” ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸಾರ್ವಜನಿಕ ಸಂಚಾರಕ್ಕಾಗಿ ಜಿಲ್ಲೆಯಲ್ಲಿ ಇತ್ತೀಚೆಗೆ ಅಭಿವೃದ್ಧಿ ಪಡಿಸಲಾಗಿರುವ ರಸ್ತೆಗಳಲ್ಲಿ ಸಂಚಾರಿ ಸುರಕ್ಷತಾ ಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಟಾನ ಮಾಡಬೇಕು. ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ರಸ್ತೆಗಳ ಗುಣಮಟ್ಟ ಕಾಪಾಡಬೇಕು. ಅಗತ್ಯವಿರುವೆಡೆ ವೃತ್ತಗಳನ್ನು ನಿರ್ಮಿಸಬೇಕು. ಈ ಸಂಬಂಧ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಮೃತ್ 2.0 ಯೋಜನೆ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮಗಳನ್ನು ನಿಯಾಮಾನುಸಾರ ಅಧಿಕಾರಿಗಳು ನನ್ನನ್ನು ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತಂದು ಅನುಷ್ಟಾನಗೊಳಿಸಬೇಕು ” ಎಂದರು.
” ಬೇಸಿಗೆ ಆರಂಭವಾಗುತ್ತಿರುವುದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಜಲಜೀವನ್ ಯೋಜನೆಯಡಿ ಕಾಡಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್‍ಲೈನ್ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸದೇ ಸಹಕರಿಸಬೇಕು. ಜಿಲ್ಲೆಯಲ್ಲಿ ಬ್ಯಾಂಕುಗಳು ಜನರಿಗೆ ಸಕಾಲದಲ್ಲಿ ಸಾಲ ನೀಡಬೇಕು. ಜನರನ್ನು ಪದೆಪದೇ ಅಲೆದಾಡಿಸಬಾರದು. ಬಡವರಿಗೆ ಅನುಕೂಲವಾಗುವ ಯೋಜನೆಗಳನ್ನು ಕೇಂದ್ರಸರ್ಕಾರ ಅನುಷ್ಟಾನ ಮಾಡುತ್ತಿದೆ. ಯೋಜನೆಗಳು ಫಲಪ್ರದವಾಗಬೇಕು, ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನವಾಗಬೇಕು .

ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ನೀಡಬೇಕು. ಇತ್ತೀಚೆಗೆ ಕಾಣಿಸಿಕೊಂಡಿರುವ ಹಕ್ಕಿಜ್ವರ ಇತರೆಡೆಯಿಂದ ಜಿಲ್ಲೆಗೆ ವ್ಯಾಪಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ವಹಿಸಬೇಕು. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ ಯಾವುದೇ ಲೋಪಗಳಾಗದಂತೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬಂದರೆ ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಪ್ರಾಣಹಾನಿ ಸಂಭವಿಸದಂತೆ ಎಚ್ಚರ ವಹಿಸುವಂತೆ ” ಸಲಹೆ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಜಿಲ್ಲೆಯ ಕಾಡಂಚಿನ ಪ್ರದೇಶಗಳು ಹಾಗೂ ಹಾಡಿಗಳಿಗೆ ಸಮರ್ಪಕ ರಸ್ತೆ, ವಿದ್ಯುದ್ದೀಕರಣ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಕಾಮಗಾರಿ ಆರಂಭಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿದ್ಯುದ್ದೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಪಾಲಾದ ಲಕ್ಷ್ಮಣಪುರ ಗ್ರಾಮ : ಪರಿಹಾರವೂ ಇಲ್ಲ, ಪುನರ್ವಸತಿಯು ಇಲ್ಲ
ಕಾಡಾ ಅಧ್ಯಕ್ಷ ಪಿ ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.