ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ಅವರಿಗೆ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ. ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದ್ದು, ಮತದಾನ ಮಾಡಲು ಧಾರವಾಡಕ್ಕೆ ಹೋಗಲು ಅನುಮತಿ ನೀಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಸಿಬಿಐ ಎಸ್ಪಿಪಿ ಗಂಗಾಧರ ಶೆಟ್ಟಿ, “ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ಪಾಲಿಕೆ ಸದಸ್ಯರಾಗಿದ್ದಾರೆ. ಅಲ್ಲದೆ, ಆರೋಪಿ ವಿನಯ್ ಕುಲಕರ್ಣಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಪ್ರಭಾವ ಮತ್ತಷ್ಟು ಹೆಚ್ಚಾಗಿದೆ. ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ಧಾರವಾಡ ಪ್ರವೇಶಿಸಲು ಅನುಮತಿ ನೀಡಬಾರದು” ಎಂದು ವಾದ ಮಂಡಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅರ್ಜಿಯನ್ನು ವಜಾಗೊಳಿಸಿದ್ದು, ಅನುಮತಿ ನೀಡಲು ನಿರಾಕರಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಪ್ರಚಾರಕ್ಕಾಗಿ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ಕೋರಿ ಈ ಹಿಂದೆಯೂ ಅರ್ಜಿ ಸಲ್ಲಿಸಿದ್ದರು. ಆಗಲೂ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು. ವಿನಯ್ ಪರವಾಗಿ ಅವರ ಪತ್ನಿ ಮತ್ತು ಕಾರ್ಯಕರ್ತರು ಪ್ರಚಾರ ನಡೆಸಿದ್ದರು. ವಿನಯ್ ಕ್ಷೇತ್ರಕ್ಕೆ ಪ್ರವೇಶಿಸದೆಯೇ ಗೆಲುವು ಸಾಧಿಸಿದ್ದರು.