ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವಾರ್ಡ್ ಮರುವಿಂಗಡಣೆಯಲ್ಲಿ ಸಾಕಷ್ಟು ಲೋಪಗಳಿದ್ದು, ಮತ್ತೊಮ್ಮೆ ಹೊಸದಾಗಿ ವಾರ್ಡ್‌ಗಳನ್ನು ಪುನರ್‌ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ನೀಡಿರುವ ಹೈಕೋರ್ಟ್, ಪುನರ್‌ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು 12 ವಾರಗಳ ಗಡುವು ನೀಡಿದೆ.
ಬಿಬಿಎಂಪಿ ಚುನಾವಣೆ ನಡೆದು 8 ವರ್ಷಗಳಾಗಿವೆ. ಕಳೆದ ಮೂರು ವರ್ಷಗಳಿಂದ ಆಡಳಿತಾಧಿಕಾರಿ ಬಿಬಿಎಂಪಿಯನ್ನು ಮುನ್ನಡೆಸುತ್ತಿದ್ದಾರೆ. ಇದೀಗ, ಮತ್ತೆ ವಾರ್ಡ್ ಪುನರ್‌ವಿಂಗಡಣೆ ನಡೆಯಲಿದ್ದು, ಚುನಾವಣೆಗೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಬಿಬಿಎಂಪಿ ವಾರ್ಡ್ ಮರುವಿಂಗಡಣೆಗೆ ಅನುಮತಿ ಕೋರಿ ಸರ್ಕಾರದ ಪರವಾಗಿ ಎ.ಜೆ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, “ಈ ಹಿಂದೆ ನಡೆದ ಮರುವಿಂಗಡಣೆಯಲ್ಲಿ ಹಲವಾರು ಲೋಪಗಳಿವೆ. ಅವುಗಳನ್ನು ಸರಿಪಡಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದ್ದರು.
ವಾದ ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ಪ್ರಸನ್ನ ಬಿ ವರಾಳೆ ಮತ್ತು ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ, 12 ವಾರಗಳ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಈ ಹಿಂದೆ ಬಿಜೆಪಿ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಮಾಡಿತ್ತು. ಆ ಪ್ರಕ್ರಿಯೆಯು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಇದೀಗ, ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು, ಮತ್ತೆ ವಾರ್ಡ್‌ಗಳ ಪುನರ್‌ವಿಂಗಡಣೆಗೆ ಮುಂದಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.