ಹತ್ತನೇ ತರಗತಿಯ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಓದುವ ಮೂಲಕ ತಮ್ಮ ಅತ್ಯಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ಹತ್ತನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.
ತಾಲ್ಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾರದ ದೇವಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಶಾರದಾ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಇಪ್ಪತ್ತು ದಿನಗಳು ಅಮೂಲ್ಯ ಸಮಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸಮಯವನ್ನು ವ್ಯರ್ಥ ಮಾಡದೆ ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು. ಗಣಿತ, ಬೌತಶಾಸ್ತ್ರ, ಜೀವಶಾಸ್ತ್ರ, ಇಂಗ್ಲಿಷ್ ಕೆಲವು ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಕಷ್ಟ ಎನಿಸುವ ಕೆಲವು ವಿಷಯಗಳಲ್ಲಿ ಶಿಕ್ಷಕರು ಅವರಿಗೆ ಮತ್ತೊಮ್ಮೆ ಪುನರ್ ಮನನ ಮಾಡಬೇಕೆಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉತ್ತಮ ಫಲಿತಾಂಶ ಗಳಿಸಿ ಕಡಬ ಕರ್ನಾಟಕ ಪಬ್ಲಿಕ್ ಶಾಲೆ, ಜಿಲ್ಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ತಿಳಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ ಶಿಕ್ಷಣ ಉದ್ಯೋಗವನ್ನು ನೀಡಿದರೆ ಸಂಸ್ಕಾರ ಬದುಕನ್ನು ರೂಪಿಸುತ್ತದೆ ವಿದ್ಯಾರ್ಥಿಗಳು ಇವೆರಡನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದಲ್ಲಿಯೇ ಶಾಲೆಗೆ ಉತ್ತಮ ಫಲಿತಾಂಶ ಪಡೆಯಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳು ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಭಾರತೀಯ ಸಂಪ್ರದಾಯದ ಉಡುಗೆ ತೊಡುಗೆಗಳನ್ನು ತೊಟ್ಟು ವಿಶೇಷ ಗಮನ ಸೆಳೆದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್, ಬಿ ಆರ್ ಸಿ ಮಧುಸೂದನ್,ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಿ ಸಿ ಶಿವಣ್ಣ, ಗಂಗಪಟ್ಟಣ ನಟರಾಜ್, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.