ಮಹಾ ಕುಂಭಮೇಳಕ್ಕೆ ತೆರಳಿದ್ದ 900 ಮಂದಿ ಇಂದಿಗೂ ಕೂಡಾ ಪತ್ತೆಯಾಗಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಮಂತ್ರಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಹಾಗೆಯೇ ಈ ಬಗ್ಗೆ ನಾಪತ್ತೆಯಾದವರ ಕುಟುಂಬಸ್ಥರಿಗೆ ಸರ್ಕಾರ ಸರಿಯಾದ ಮಾಹಿತಿ ನೀಡುವಂತೆ ಸವಾಲೆಸೆದಿದ್ದಾರೆ.
ಮಹಾ ಕುಂಭಮೇಳ ಈ ವರ್ಷದ ಜನವರಿ 13ರಿಂದ ಫೆಬ್ರವರಿ 26ರವರೆಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಸುಮಾರು 144 ವರ್ಷಕ್ಕೊಮ್ಮೆ ಈ ಮಹಾ ಕುಂಭಮೇಳ ನಡೆಯುತ್ತದೆ ಎಂದು ಹೇಳಲಾಗುತ್ತದೆ.
ಇದನ್ನು ಓದಿದ್ದೀರಾ? ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ಅಪಘಾತ; ಬೀದರ್ ಜಿಲ್ಲೆಯ 6 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ
ಜನವರಿ 29ರಂದು ಮಹಾ ಕುಂಭಮೇಳದ ಸಂದರ್ಭದಲ್ಲಿ ಕಾಲ್ತುಳಿತ ನಡೆದಿದ್ದು, ಸುಮಾರು 30 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಆದರೆ ಮೃತರ ಸಂಖ್ಯೆ ಇನ್ನೂ ಹೆಚ್ಚಿದೆ, ಸರ್ಕಾರ ಮುಚ್ಚಿಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದೆ. ನಾಪತ್ತೆಯಾದವರ ಬಗ್ಗೆಯೂ ಸರ್ಕಾರವನ್ನು ಪ್ರಶ್ನಿಸಿದೆ.
ಈ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅಖಿಲೇಶ್ ಯಾದವ್, ನಾಪತ್ತೆಯಾದವರ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. “ಆಸ್ಪತ್ರೆ, ಪೊಲೀಸ್ ಠಾಣೆಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಇನ್ನೂ ಕೂಡಾ ನಾಪತ್ತೆಯಾದ ಸುಮಾರು 900 ಮಂದಿಗಳ ಪೋಸ್ಟರ್‌ಗಳಿವೆ. ಈ ಬಗ್ಗೆ ಸರ್ಕಾರ ಸರಿಯಾದ ಮಾಹಿತಿ ನೀಡಬೇಕು” ಎಂದು ಆಗ್ರಹಿಸಿದ್ದಾರೆ.
