ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಸಿವಿಲ್ ನ್ಯಾಯಾಧೀಶರೂ ಆದ ಅಚಪ್ಪ ದೊಡ್ಡಬಸವರಾಜ ಹೇಳಿದರು.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯವಾದಿಗಳ ಸಂಘ, ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ತಾಲೂಕ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕತೆ ನಿರ್ಮೂಲನೆ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
“ಎಲ್ಲರೂ ಕಾನೂನು ಅರಿತು ತಮ್ಮ ಇತಿಮಿತಿಯಲ್ಲಿ ನಡೆದುಕೊಂಡರೆ ಸುಖ, ಶಾಂತಿ, ನೆಮ್ಮದಿಯ ಬದುಕು ನಡೆಸಬಹುದು. ಆದ್ದರಿಂದಲೇ ಎಲ್ಲ ಶಾಲೆ, ಕಾಲೇಜಿನ ವಿದ್ಯಾರ್ಥಿಗಳು, ಗೃಹಿಣಿಯರು, ವ್ಯಾಪಾರಸ್ಥರು, ಉದ್ಯೋಗಿಗಳು, ನೌಕರರು ಸೇರಿ ಎಲ್ಲ ವರ್ಗದವರಿಗೂ ಕಾನೂನಿನ ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ” ಎಂದು ಹೇಳಿದರು.
ವಕೀಲ ಎಸ್ ಎಸ್ ಖಾದ್ರಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕುರಿತು ಉಪನ್ಯಾಸ ನೀಡುತ್ತ, “ಗ್ರಾಹಕರು ಗ್ರಾಹಕರಿಗಿರುವ ಕಾನೂನಾತ್ಮಕ ಹಕ್ಕುಗಳು ಹಾಗೂ ಅವುಗಳ ಪ್ರಾಮುಖ್ಯತೆ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಪ್ರತಿಯೊಂದು ವಸ್ತು ಖರೀದಿ ಮಾಡುವ ಸಂದರ್ಭದಲ್ಲಿ ವಸ್ತುವಿನ ಗುಣಮಟ್ಟವನ್ನು ಸರಿಯಾಗಿ ಪರಿಶೀಲನೆ ಮಾಡಿ ಖರೀದಿ ಮಾಡಬೇಕು” ಎಂದು ತಿಳಿಸಿದರು.
ರಾಯಚೂರು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿಯವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ-2016ರ ಕುರಿತು ಉಪನ್ಯಾಸ ನೀಡುತ್ತ, “14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಮತ್ತು ತಿದ್ದುಪಡಿ ಕಾಯ್ದೆ-2016ರಡಿ ಪ್ರಕರಣ ದಾಖಲಿಸಲಾಗುವುದು” ಎಂದು ತಿಳಿಸಿದರು.
“ದುಡಿಯುವ ಮಕ್ಕಳು ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಮಕ್ಕಳ ಸಹಾಯವಾಣಿ ಸಂಖ್ಯೆ 1098/112ಕ್ಕೆ ಉಚಿತವಾಗಿ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಪಿಡುಗನ್ನು ಹೋಗಲಾಡಿಸಲು ಹಾಗೂ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ನಿರ್ಮಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್ ರಾಮನಗೌಡ, ಕಾರ್ಮಿಕ ನಿರೀಕ್ಷಕರು ವಿಜಯಲಕ್ಷ್ಮೀ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅಶೋಕ ತುರ್ವಿಹಾಳ, ಲಿಂಗನಗೌಡ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಾ, ತಾಲೂಕು ನ್ಯಾಯವಾದಿಗಳ ಸಂಘದ ಖಜಾಂಚಿಗಳಾದ ಶರಣ ಬಸವ ಉಮಲೂಟಿ ಸೇರಿದಂತೆ ಇತರರು ಇದ್ದರು.
