ಆಶಾ ಕಾರ್ಯಕರ್ತೆಯರಿಗೆ ಏ. 1ರಿಂದ ಅನ್ವಯ ಆಗುವಂತೆ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗೌರವಧನವನ್ನು ಪಾವತಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಇತ್ತೀಚೆಗೆ ಮಂಡಿಸಿದ ರಾಜ್ಯ ಆಯವ್ಯಯದಲ್ಲಿ ಉಳಿದ ಯೋಜನೆಯ ಕಾರ್ಮಿಕರಿಗೆ ಮಾಸಿಕ ₹1 ಸಾವಿರ ಗೌರವಧನ ಹೆಚ್ಚಳ ಮಾಡಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ನಿರ್ಲಕ್ಷಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
‘ಆಶಾ ಕಾರ್ಯಕರ್ತೆಯರ ಗೌರವಧನ ಏರಿಕೆಗೆ ಜ. 15ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವೇಳೆ ಆರೋಗ್ಯ ಸಚಿವರು ಉನ್ನತ ಅಧಿಕಾರಿಗಳೊಂದಿಗೆ ಸೇರಿ ಸಭೆ ನಡೆಸಿ ಗೌರವಧನ ಏರಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವುದೇ ಆದೇಶ ಹೊರಡಿಸಿಲ್ಲ. ಆಯವ್ಯಯದಲ್ಲಿ ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ ಏರಿಕೆ ಮಾಡಲಾಯಿತೇ ಹೊರತು, ಆಶಾ ಕಾರ್ಯಕರ್ತೆಯರ ಕಾಳಜಿ ವಹಿಸಿಲ್ಲ’ ಎಂದು ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಮಹೇಶ ನಾಡಗೌಡ ದೂರಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಕಲಿಕೋತ್ಸವ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ : ಗಣಪತಿ
ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷೆ ಮಹಾದೇವಿ, ಜಿಲ್ಲಾ ಕಾರ್ಯದರ್ಶಿ ಮೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.