2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ 58 ಕೋಟಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಬಿಸಿಸಿಐ ಗುರುವಾರ ತಿಳಿಸಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಎಲ್ಲ ಪಂದ್ಯಗಳನ್ನು ಗೆದ್ದು ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು.
ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಬಿಸಿಸಿಐ ಇದೀಗ 58 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಮೊತ್ತವನ್ನು ಆಟಗಾರರು, ತರಬೇತಿ ಹಾಗೂ ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.
2024 ರಲ್ಲಿ ಟಿ-20 ವಿಶ್ವಕಪ್ ಗೆದ್ದಿದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿತ್ತು. ಆ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಆಗ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಈ ಬಾರಿ 58 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಸದಸ್ಯರಿಗೆ ಹಂಚುವ ಸಾಧ್ಯತೆ ಇದೆ.
ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದ ಸದಸ್ಯರು
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.