ಎಲ್ಲ ಕಾರ್ಮಿಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗಳಿಗೆ ಕಳುಹಿಸಬೇಕು. 18 ವರ್ಷದವರೆಗೆ ಶಿಕ್ಷಣ ಮುಂದುವರೆಸಲು ಸಹಕರಿಸಿ ಮಕ್ಕಳಿಗೆ ತಪ್ಪದೇ ಶಿಕ್ಷಣ ಕೊಡಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆಯಡಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಸಂಡೂರಿನ ಕುಮಾರಸ್ವಾಮಿ ಕಟ್ಟಡ ಕಾರ್ಮಿಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಮಕ್ಕಳ ಶಿಕ್ಷಣದ ಅವಧಿಯಲ್ಲಿ ಶಾಲೆಯಿಂದ ತಪ್ಪಿಸಿ ಕೆಲಸಕ್ಕೆ ಕಳುಹಿಸಬಾರದು. ಅಂತಹ ಘಟನೆಗಳನ್ನು ಕಂಡುಬಂದಲ್ಲಿ ಸಂಬಂಧಿಸಿದ ಪೋಷಕರ ಮೇಲೆ ಹಾಗೂ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.
“ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಲಾಖೆಯ ನಿರ್ದೇಶನದಂತೆ ಕಡ್ಡಾಯವಾಗಿ ಅರ್ಹ ಪ್ರತಿಯೊಬ್ಬರು ನೋಂದಣಿ ಮಾಡಿಕೊಂಡು ಕಾಲಕಾಲಕ್ಕೆ ನವೀಕರಣ ಮಾಡಿಸಿಕೊಂಡಾಗ ಯೋಜನೆ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ” ಎಂದರು.
ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು ಅವರು ಮಾತನಾಡಿ, “ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡ ಪ್ರತಿಯೊಬ್ಬ ಕಾರ್ಮಿಕರು ಕಡ್ಡಾಯವಾಗಿ ವರ್ಷದಲ್ಲಿ 90 ದಿನ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರ್ವಹಿಸುವುದು ಕಡ್ಡಾಯವಾಗಿದೆ” ಎಂದು ತಿಳಿಸಿದರು.
“ಮಂಡಳಿಯ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಿದಾಗ ಇಲಾಖೆಯ ಅಧಿಕಾರಿಗಳು ಪರಿಶೀಲನೆ ಸಂದರ್ಭದಲ್ಲಿ ಕಟ್ಟಡ ಕೆಲಸ ನಿರ್ವಹಿಸುತ್ತಿರುವುದನ್ನು ಗಮನಿಸಿ ಸೌಲಭ್ಯ ನೀಡಲು ಅನುಮೋದಿಸುತ್ತಾರೆ. ಯಾರು ಕಟ್ಟಡ ನಿರ್ಮಾಣ ಕೆಲಸ ನಿರ್ವಹಿಸುತ್ತಿಲ್ಲವಾದರೆ ಅವರಿಂದ ಹೇಳಿಕೆ ಪಡೆದು ಅರ್ಜಿ ತಿರಸ್ಕರಿಸಲಾಗುತ್ತದೆ. ಮಂಡಳಿ ವತಿಯಿಂದ ನಿಜವಾದ ಕಾರ್ಮಿಕರಿಗೆ ಸೌಲಭ್ಯ ಒದಗಿಸುವುದು ಮುಖ್ಯ ಉದ್ದೇಶವಾಗಿದೆ” ಎಂದು ಹೇಳಿದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ. ಮೌನೇಶ್ ಮಾತನಾಡಿ, “6 ರಿಂದ 18 ವರ್ಷದೊಳಗಿನ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಯಾವುದೇ ಉದ್ದಿಮೆಯಲ್ಲಿ ದುಡಿಸಿಕೊಳ್ಳಬಾರದು. ಆಕಸ್ಮಿಕವಾಗಿ ದುಡಿಸಿಕೊಳ್ಳುತ್ತಿರುವುದು ಕಂಡುಬಂದರೆ ಅಂಥವರ ಮೇಲೆ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಗುರುತಿಸಲಾದ ಬಾಲಕಾರ್ಮಿಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಕ್ಕಳಿಗೆ ಯೋಜನೆಯಡಿ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ಅವರ ಶಿಕ್ಷಣದ ಮುಂದುವರಿಕೆಗೆ ಪ್ರಯತ್ನಿಸಲಾಗುವುದು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅದ್ದೂರಿಯಾಗಿ ಜರುಗಿದ ಶರಣ ಬಸವೇಶ್ವರ ರಥೋತ್ಸವ
ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಕಾಯ್ದೆಯಲ್ಲಿ ಆಗಿರುವ ತಿದ್ದುಪಡಿಗಳ ಕುರಿತು ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕ ಮಂಜುನಾಥ ಅವರು ಇಲಾಖೆಯ ಯೋಜನೆಗಳಾದ ಕಟ್ಟಡ ಕಾರ್ಮಿಕ ಮಂಡಳಿ ಹಾಗೂ ಅಸಂಘಟಿತ ಮಂಡಳಿಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುಮಾರಸ್ವಾಮಿ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಇತರರು ಇದ್ದರು.
