- ವಯಸ್ಸಿನ ದಾಖಲೆ ಅಥವಾ ಆಧಾರ್ ತೋರಿಸಿದರೆ ಶೀಘ್ರ ದರ್ಶನ
- ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರ ಸ್ಥಾಪನೆ
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಬಸವರಾಜೇಂದ್ರ ಅವರು ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ, 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ತಪ್ಪದೇ ಅಗತ್ಯ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ ಅಥವಾ ಆಧಾರ್ ತೋರಿಸಿದರೆ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಲು ಸೂಚಿಸಲಾಗಿದೆ.
ಸಹಾಯ ಕೇಂದ್ರ ಸ್ಥಾಪನೆ
ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗಾಗಿ ಸಹಾಯ ಕೇಂದ್ರವನ್ನು ಸ್ಥಾಪಿಸಿ, ಹಿರಿಯ ನಾಗರಿಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರಿಕರಿಗೆ ತ್ವರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ವಿವರಿಸಲಾಗಿದೆ.