- ಸಭೆಯಲ್ಲಿ ಪ್ರತಿ ನಾಯಕರಿಂದ ಅಭಿಪ್ರಾಯ ಮಂಡನೆ ಎಂದ ತೇಜಸ್ವಿ ಯಾದವ್
- ಜೂನ್ 23 ರಂದು ನಿತೀಶ್ ಕುಮಾರ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ
ಪ್ರತಿಪಕ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಅನುಭವಿ ನಾಯಕರಿದ್ದಾರೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗುರುವಾರ (ಜೂನ್ 22) ಅಭಿಪ್ರಾಯಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಅನುಭವಿ ನಾಯಕರು ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ತೇಜಸ್ವಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸೋಲಿಸಲು ಅದರ ವಿರುದ್ಧ ಮಹಾಮೈತ್ರಿಕೂಟವನ್ನು ರೂಪಿಸುವ ನಿರಂತರ ಪ್ರಯತ್ನಗಳ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಕರೆದಿದ್ದಾರೆ.
“ಪ್ರಧಾನಿ ಮೋದಿಯವರಿಗಿಂತ ಹೆಚ್ಚು ಅನುಭವ ಹೊಂದಿರುವ ಅನೇಕ ನಾಯಕರು ಪ್ರತಿಪಕ್ಷದಲ್ಲಿದ್ದಾರೆ ಎಂಬ ಅಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಾರೆ” ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜೂನಿಯರ್ ಇಂಜಿನಿಯರ್ ಕಪಾಳಕ್ಕೆ ಬಾರಿಸಿದ ಬಿಜೆಪಿ ಬೆಂಬಲಿತ ಶಾಸಕಿ
“ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹೆಸರನ್ನು ಬದಿಗಿಟ್ಟು ಜನರ ಸಮಸ್ಯೆಗಳ ಮುಂದಿಟ್ಟು ಹೋರಾಡಲಾಗುವುದು. ನಾಳಿನ ಸಭೆಯೂ ಬದಲಾವಣೆಯ ಧ್ವನಿಯನ್ನು ಒಂದುಗೂಡಿಸುತ್ತದೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿದೆ” ಎಂದು ತೇಜಸ್ವಿ ಹೇಳಿದರು.
“ನಿತೀಶ್ ಕುಮಾರ್ ಮತ್ತು ನಾನು ಒಗ್ಗೂಡಿದ ನಂತರ ಸಾಧ್ಯವಾದಷ್ಟು ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸಿದ್ದೇವೆ. ಈ ಸಭೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಮಾನ ಮನಸ್ಕ ಪ್ರತಿಪಕ್ಷಗಳ ಒಗ್ಗೂಡುವಿಕೆಗೆ ಅಡಿಪಾಯ ಹಾಕುವ ಗುರಿ ಹೊಂದಿದೆ” ಎಂದು ತೇಜಸ್ವಿ ಯಾದವ್ ಹೇಳಿದರು.
ಮುಂದಿನ ಲೋಕಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಭೆಯು ಇದರ ಭಾಗವಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಜೂನ್ 24 ರಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಮಣಿಪುರದ ಹಿಂಸಾಚಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.