ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂಬ ಒತ್ತಾಯದೊಂದಿಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಳಗಾವಿ ನಗರದಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಶನಿವಾರ ಬೆಳಿಗ್ಗೆಯಿಂದಲೇ ಬೆಳಗಾವಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ವಿಸ್‌ಗಳು ಎಂದಿನಂತೆ ಕಾರ್ಯಾಚರಿಸುತ್ತಿದ್ದು, ಹೋಟೆಲ್‌ಗಳು ಹಾಗೂ ಅಂಗಡಿಗಳು ಸಹ ಸಾಮಾನ್ಯ ಸ್ಥಿತಿಯಲ್ಲೇ ತೆರೆಯಲ್ಪಟ್ಟಿವೆ. ಆದರೆ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿಯಿಂದ ಮಹಾರಾಷ್ಟ್ರದತ್ತ ತೆರಳುವ ಹಾಗೂ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಗರದ ಪ್ರಮುಖ ವೃತ್ತಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲಾಗಿದೆ. ಬಂದ್‌ಗೆ ಬೆಂಬಲ ಸೂಚಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಕರ್ತರು ಕೇಂದ್ರೀಯ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.