ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರತದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ದೇಶದ ನಾನಾ ಭಾಗಗಳಲ್ಲಿ ಮಳೆಯಾಗಲಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಾರ್ಚ್ 24ರವರೆಗೆ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತದೆ ಎಂದು ಹೇಳಿದೆ.
ಬೆಂಗಳೂರಿನ ಚಿಕ್ಕಪೇಟೆ, ಕೆ.ಆರ್ ಮಾರ್ಕೆಟ್, ಬಸವನಗುಡಿ, ಕೋರಮಂಡಲ ಸೇರಿದಂತೆ ನಾನಾ ಭಾಗಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ.