ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ.
ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಸೈಬಣ್ಣ ನಾಗಣ್ಣ (25) ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾರೆ.
ಅಪರಾಧಿ 15 ವರ್ಷದ ಬಾಲಕಿಗೆ ಮದುವೆ ಆಗುವುದಾಗಿ ನಂಬಿಸಿದ್ದ. ಆಳಂದದ ಸಾರ್ವಜನಿಕ ಮಹಿಳಾ ಶೌಚಾಲಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಆ ಬಳಿಕ ಸ್ನೇಹಿತನ ಕಾರಿನಲ್ಲಿ ಬಾಲಕಿಯನ್ನು ಅಪಹರಿಸಿ ಹುಬ್ಬಳ್ಳಿಗೆ ತೆರಳಿದ. ಅಲ್ಲಿಂದ ಹರಿಯಾಣಕ್ಕೆ ಕರೆದೊಯ್ದು ಅಕ್ರಮ ಬಂಧನದಲ್ಲಿ ಇರಿಸಿ ಅತ್ಯಾಚಾರ ಎಸಗಿದ್ದ.
ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪಿಎಸ್‌ಐ ತಿರುಮಲೇಶ, ಪಿಐ ಮಹಾದೇವ ಪಂಚಮುಖಿ ಅವರು ತನಿಖಾಧಿಕಾರಿಗಳಾಗಿ, ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಾದ–ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎಫ್‌ಟಿಎಸ್‌ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಸೈಬಣ್ಣಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ ಅಡಿ 35 ವರ್ಷ ಜೈಲು ಶಿಕ್ಷೆ ಮತ್ತು ₹38 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ತಂದೆ ಸಾವಿನ ದುಃಖದ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ
ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷವನ್ನು ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದ್ದರು