- ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆ ಅತಿ ಹೆಚ್ಚು ಮಳೆ
- ಹೊನ್ನಾವರ ತಾಲೂಕಿನ ಹಳೆಮೇಟ್‌ನಲ್ಲಿ 110 ಮಿ.ಮೀ ಮಳೆ
ರಾಜ್ಯದಲ್ಲಿ ಕ್ಷೀಣವಾಗಿದ್ದ ಮುಂಗಾರು ಮಳೆ ಇದೀಗ ಚುರುಕಾಗಿದ್ದು, ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಜೂನ್ 27 ರವರೆಗೆ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ ಸರಾಸರಿ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ ನಗರ ಗ್ರಾಮಾಂತರ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾಮಾನ್ಯವಾಗಿ ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಭಾರೀ ಮಳೆಯಾಗಲಿದ್ದು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕೆಲವು ದಿನಗಳ ಕಾಲ ಒಣಹವೆ ಇರಲಿದ್ದು, ಸಾಧಾರಣ ಮಳೆ ಸುರಿಯಲಿದೆ ಎಂದಿದೆ.
ಉತ್ತಮ ಮಳೆ
ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಮೂರು ಕಡೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹೊನ್ನಾವರ ತಾಲೂಕಿನ ಹಳೆಮೇಟ್‌ನಲ್ಲಿ 110 ಮಿ.ಮೀ ಮಳೆಯಾಗಿದ್ದು, ಕುಮಟಾ ತಾಲೂಕಿನ ಕಲ್ಲಬ್ಬೆಯಲ್ಲಿ 96 ಮಿ.ಮೀ ಮತ್ತು ಭಟ್ಕಳ ತಾಲೂಕಿನ ಬೆಂಗ್ರೆಯಲ್ಲಿ 86 ಮಿಮೀ ಮಳೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ ಆರಂಭ
ಕಾರವಾರ, ಬಾಗಲಕೋಟೆ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಕಡೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಬೆಳಗ್ಗೆ ತುಂತುರು ಮಳೆ ಬಿದ್ದಿದೆ. ದಕ್ಷಿಣ ಕನ್ನಡ, ಮಂಗಳೂರು ನಗರದಲ್ಲಿ ಜೋರು ಮಳೆಯಾಗಿದ್ದು, ಕೆಲವೆಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.