ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದ್ದು, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಬೂತ್ ಮಟ್ಟದ ಪ್ರಜಾ ಪ್ರತಿನಿಧಿಗಳ ಆಯ್ಕೆಯ ಸಭೆಯಲ್ಲಿ ಮಾತನಾಡಿದರು.
“ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ. ಅದರಲ್ಲಿ ಹೆಚ್ಚಿನ ಶ್ರಮ ವಹಿಸುವ ಜತೆಗೆ ಪಕ್ಷದ ತತ್ವ, ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆ, ಮನೆಗಳಿಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳಿಗೆ ಪರದಾಟ
ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಮತ್ತು ಮಾಜಿ ಸಂಸದ ಮಂಜುನಾಥ ಕುನ್ನೂರ ಮಾತನಾಡಿ, “ಸೋಲು, ಗೆಲವುಗಳನ್ನು ಸಮಾನವಾಗಿ ಸ್ವೀಕರಿಸೋಣ. ಯಾವುದೇ ಕಾರ್ಯಕರ್ತರು ಹಿಂಜರಿಯಬೇಡಿ. ನಾವೆಲ್ಲ ಒಟ್ಟಾಗಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು” ಎಂದು ತಿಳಿಸಿದರು.