ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಚೇರಿ ಹಾಗೂ ಶಾಲಾ ಕಾಲೇಜಗಳ ಕರ್ತವ್ಯದ ಸಮಯ ಬದಲಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಆಗ್ರಹಿಸಿದೆ.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಅವರು ಯಾದಗಿರಿ, ರಾಯಚೂರು ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
‘2025ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆಯು ಹೆಚ್ಚಿರುವ ಕಾರಣ ಸಾರ್ವಜನಿಕರ ಮತ್ತು ನೌಕರರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆʼ ಎಂದರು.
ಈ ಎರಡು ತಿಂಗಳ ಕಾಲ ಕಚೇರಿ, ಶಾಲಾ-ಕಾಲೇಜುಗಳ ಕರ್ತವ್ಯದ ಸಮಯವನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಸಮಯ ಬದಲಾವಣೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಉಲ್ಲೇಖಿತ ಮನವಿಯಲ್ಲಿ ಕೋರಿದರು.
