ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳಡಿ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
“ಡ್ಯಾಶ್ ಬೋರ್ಡ್ ಸಮಸ್ಯೆಯಿಂದಾಗಿ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕುರಿತು ನಿಖರವಾದ ಮಾಹಿತಿ ದೊರೆಯುತ್ತಿಲ್ಲ. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಮೂಲಕ 2024ರ ಡಿಸೆಂಬರ್ ಮಾಹೆಯವರೆಗೆ 3 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಒಟ್ಟು 1030 ಕೋಟಿ 27 ಲಕ್ಷದ 78 ಸಾವಿರ ರೂಪಾಯಿಯನ್ನು ಡಿಬಿಟಿ ಮೂಲಕ ನೇರವಾಗಿ ಪಾವತಿಸಲಾಗಿದೆ” ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಅಕ್ರಮ ಅಕ್ಕಿ ಸಾಗಾಣಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮಾರಾಟ ಮಾಡಿದರೆ, ಅಂತಹ ಫಲಾನುಭವಿಗಳ ಪಡಿತರ ಚೀಟಿಯನ್ನು ರದ್ದುಪಡಿಸಲು ಅವಕಾಶವಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಲು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ರೂ. 10 ಕೋಟಿ ಅನುದಾನ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ರಮ ವಹಿಸಬೇಕು” ಎಂದರು.
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳಿಗೆ ಸಿಇಓ ಗುರುತಿನ ಚೀಟಿಗಳನ್ನು ವಿತರಣೆ ಮಾಡಿದರು.
ಇದನ್ನೂ ಓದಿ: ಕೊಪ್ಪಳ | ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರ ಕೂಡಲೇ ಕೈಬಿಡಿ: ರಾಜಶೇಖರ್ ಆಗ್ರಹ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ನಾಗರಾಜ್ ಅರಳಿ, ಅಮರೇಶ ಎಸ್ ಗಾಂಜಿ, ಮಂಜುನಾಥ ಗೋಂಡಬಾಳ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲ್ಲೂಕು ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.