ಏಪ್ರಿಲ್‌ನಿಂದ ಜೂನ್ ತಿಂಗಳವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಮಧ್ಯ ಮತ್ತು ಪೂರ್ವ ಭಾರತ, ವಾಯುವ್ಯ ಬಯಲು ಪ್ರದೇಶಗಳಲ್ಲಿ ಅಧಿಕ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ತಿಳಿಸಿದೆ.
ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳು ಸಾಮಾನ್ಯಕ್ಕಿಂತ ಗರಿಷ್ಠ ತಾಪಮಾನವನ್ನು ಕಾಣಲಿವೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಭಾರೀ ಮಳೆ: ಹವಾಮಾನ ಇಲಾಖೆ
“ಸಾಮಾನ್ಯಕ್ಕಿಂತ ಎರಡು- ನಾಲ್ಕು ದಿನ ಅಧಿಕ ಬಿಸಿ ಗಾಳಿ ಅನುಭವಿಸಬೇಕಾಗಬಹುದು” ಎಂದೂ ಹೇಳಿದ್ದಾರೆ. ಸಾಮಾನ್ಯವಾಗಿ, ಏಪ್ರಿಲ್‌ನಿಂದ ಜೂನ್‌ವರೆಗೆ ಭಾರತದಲ್ಲಿ ನಾಲ್ಕರಿಂದ ಏಳು ದಿನ ಬಿಸಿ ಗಾಳಿ ಅಪ್ಪಳಿಸುತ್ತದೆ. ಇದಕ್ಕಿಂತಲೂ ಅಧಿಕ ಬಾರಿ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಮತ್ತು ತಮಿಳುನಾಡು, ಕರ್ನಾಟಕದ ಉತ್ತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ಇನ್ನು ಈಗಾಗಲೇ ಈ ಬೇಸಿಗೆಯಲ್ಲಿ ಭಾರತವು ಶೇಕಡ 9ರಿಂದ 10ರಷ್ಟು ಗರಿಷ್ಠ ವಿದ್ಯುತ್ ಬೇಡಿಕೆಗೆ ಸಿದ್ಧವಾಗಿರಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
