ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ‘ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ‘ ಎಂದರು.
” ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡು ಬಂದಲ್ಲಿ ತಕ್ಷಣವೇ ಪರಿಹರಿಸಿ. ಎಲ್ಲಿಯೇ ಆಗಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಬೇಕು. ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರು ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ” ನೀಡಿದರು.
” ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ. ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಸಮಸ್ಯೆಯಾಗದಂತೆ ನೀರು ಪೂರೈಸುವುದು ಅಧಿಕಾರಿಗಳ ಮುಖ್ಯ ಹೊಣೆಗಾರಿಕೆಯಾಗಿದೆ. ಹೆಚ್ಚು ಸಂಗ್ರಹ ಸಾಮಥ್ರ್ಯದ ಟ್ಯಾಂಕ್‍ಗಳಲ್ಲಿ ನೀರು ಶೇಖರಣೆ ಮಾಡಬೇಕಿದೆ. ನೀರಿನ ಸರಬರಾಜು ಮಾಡುವ ಸ್ಥಳಗಳಲ್ಲಿ ಯಾವುದೇ ಸೋರಿಕೆ ಆಗದಂತೆ ಎಚ್ಚರವಹಿಸಿ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಯಾವುದೇ ಲೋಪವಿಲ್ಲದಂತೆ ನಡೆಯಬೇಕು. ಗ್ರಾಮ ಪಂಚಾಯಿತಿಗಳು ಯೋಜನೆ ಹಸ್ತಾಂತರಿಸಿಕೊಳ್ಳುವ ಮೊದಲು ಎಲ್ಲವೂ ಸರಿಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತ ಸೂಚನೆ ನೀಡಬೇಕೆಂದು ” ಸೂಚಿಸಿದರು.

” ಮಳೆಗಾಲದಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ದಾಸ್ತಾನು ಮಾಡಬೇಕು. ಎಲ್ಲಿಯೂ ಕೊರತೆಯಾಗಬಾರದು. ಜಾನುವಾರುಗಳಿಗೆ ಮೇವು ಸಹ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರಬೇಕು. ಹಾಲಿನ ದರ ಹೆಚ್ಚಳ ಸಂಬಂಧ ಪ್ರಸ್ತಾಪಿಸಿದ ಸಚಿವರು ಹಾಲು ದರ ಏರಿಕೆ ಮಾಡಿದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ.
ಕೆಎಸ್ಆರ್ಟಿಸಿ ಬಸ್‍ಗಳ ಸೇವೆ ಸಮರ್ಪಕವಾಗಿ ಸಿಗಬೇಕು. ಲಾಭವನ್ನಷ್ಟೇ ನೋಡದೇ ಗ್ರಾಮೀಣ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚು ಬಸ್ಸುಗಳನ್ನು ನಿಯೋಜಿಸಬೇಕು. ಕಳೆದ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದ ಕಳಪೆ ಬೇಳೆ ಪೂರೈಕೆ ಸಂಬಂಧ ವಿವರ ಪಡೆದ ಸಚಿವರು ಗುಣಮಟ್ಟವಿಲ್ಲದ ಬೇಳೆ ಸರಬರಾಜುದಾರರು ಹಾಗೂ ಬೇಳೆಯ ಗುಣಮಟ್ಟದ ಬಗ್ಗೆ ದೃಢೀಕರಿಸಿದವರಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ‘ ಜೆಜೆಎಂ ಕಾಮಗಾರಿ ನಿರ್ವಹಿಸಿದ ಕೆಲವು ಕಡೆ ಪೈಪ್‍ಗಳು ಒಡೆದು ಹೋಗಿ ತೊಂದರೆಯಾಗಿದೆ. ನಿಗದಿತ ಆಳ ಮತ್ತು ನಿರ್ದಿಷ್ಟ ಪೈಪ್‍ಗಳ ಅಳವಡಿಕೆಯಲ್ಲಿ ಮಾರ್ಗಸೂಚಿ ಪ್ರಕಾರ ಕಾಮಗಾರಿ ನಡೆಯಬೇಕಿದೆ. ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಗುಂಬಳ್ಳಿಯಂತಹ ಪ್ರಕರಣಗಳು ಮರುಕಳಿಸದಂತೆ ನಿಗಾವಹಿಸಬೇಕು ‘ ಎಂದರು.
ಈ ಸುದ್ದಿ ಓದಿದ್ದೀರಾ? ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ
ಲೋಕಸಭಾ ಸದಸ್ಯ ಸುನೀಲ್ ಬೋಸ್, ಹೆಚ್ ಎಸ್ ಗಣೇಶ್ ಪ್ರಸಾದ್, ಡಾ ಡಿ ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಹೆಚ್ ವಿ ಚಂದ್ರು, ಕೆಡಿಪಿ ನಾಮ ನಿರ್ದೇಶಿತ ಸದಸ್ಯ ಮಹದೇವಣ್ಣ, ಸಯ್ಯದ್ ಮುಸೈಯೀಬ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.