ದೇವಸ್ಥಾನಕ್ಕೆ ತೆರಳಿದ್ದ ದಂಪತಿಗಳ ಮೇಲೆ ಕಾಮುಕರ ಗುಂಪೊಂದು ದಾಳಿ ಮಾಡಿದ್ದು, ಪತಿಯನ್ನು ದೇವಾಲಯದ ಮರಕ್ಕೆ ಕಟ್ಟಿಹಾಕಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಏಳು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಉರ್ಕೊಂಡಪೇಟ ಗ್ರಾಮದಲ್ಲಿ ಮಹಿಳೆ ತನ್ನ ಪತಿಯೊಂದಿಗೆ ದೇವಸ್ಥಾನಕ್ಕೆ ತೆರಳಿದ್ದರು. ದೇವಾಲಯದ ಆವರಣದಲ್ಲಿ ದಂಪತಿಗಳು ಕುಳಿತಿದ್ದಾಗ, ಕಾಮುಕರು ದಾಳಿ ನಡೆಸಿದ್ದಾರೆ. ಪತಿಯ ಮೇಲೆ ಹಲ್ಲೆ ನಡೆಸಿ, ಆತನನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆಯ ಮತ್ತು ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಎಲೆಕ್ಟ್ರಿಷಿಯನ್, ಆಟೋ ಚಾಲಕ ಮತ್ತು ಇಬ್ಬರು ಅಡುಗೆಯವರು ಸೇರಿದ್ದಾರೆ. ಈ ಎಲ್ಲರೂ ಈ ಹಿಂದೆ ಸುಲಿಗೆ ಪ್ರಕರಣಗಳಲ್ಲಿಯೂ ಆರೋಪಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರದಿ ಓದಿದ್ದೀರಾ?: ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?
ತೆಲಂಗಾಣದಲ್ಲಿ ಇತ್ತೀಚೆಗೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಿ. ಅನಸೂಯ ಸೀತಕ್ಕ ಚರ್ಚೆ ನಡೆಸಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.