ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಸಹೋದರನ ಪುತ್ರ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.
ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ (22) ಮೃತ ದುರ್ದೈವಿ. ಅವರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಸ್ನೇಹಿತರು—ಸಣ್ಣವಿಠ್ಠಲ್ ದುರದುಂಡಿ ಮತ್ತು ನಿಂಗಪ್ಪ ಹೆಬ್ಬಾಳ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿಯಿಂದ ಕಿತ್ತೂರಿಗೆ ಕೆಲಸಕ್ಕೆ ಹೊರಟಿದ್ದ ವೇಳೆ, ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಪಡೆದ ಕಿತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.