ರಾಜ್ಯ ಭೋವಿ ಅಭಿವೃದ್ಧಿ ನಿಗಮ(KBDC)ದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ ಕೆ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್‌ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಪ್ರಿಲ್ 4ರಂದು ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಏಪ್ರಿಲ್ 5ರಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮರ್ಕಲ್ ಗ್ರಾಮ ಪಂ. ಪಿಡಿಒ ಅಮಾನತು
ಈ ಸಂಬಂಧ ಶುಕ್ರವಾರ ನಿಗಮದ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಹಾಗೂ ಲೀಲಾವತಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ವೇಳೆ ಸರಿಯಾದ ಮಾಹಿತಿ ನೀಡದಿದ್ದರಿಂದ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.