ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ” ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಜೊತೆ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ ” ಎಂದು ಭರವಸೆ ನೀಡಿದರು.
ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ” ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್ ಪೂರೈಸಲು ಸರ್ಕಾರ ₹42 ಕೋಟಿ ರೂಗಳನ್ನು ಖರ್ಚು ಮಾಡುತ್ತಿದೆ. ಆದರೆ, ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು” ಎಂದರು.
” ಜಿಲ್ಲೆಯ ಶೇ.52ರಷ್ಟು ಭೂ ಪ್ರದೇಶ ಅರಣ್ಯದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ, ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು. ಈಗ ಉಳಿದ ಹಾಡಿಗಳಿಗೂ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು”, ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘
ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲ್ ರಾಜು, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಶರಣಮ್ಮ ಎಸ್. ಜಂಗಿನ್, ಪ್ರಧಾನ ವ್ಯವಸ್ಥಾಪಕಿ ಬಿ.ಆರ್. ರೂಪ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕ ಎಲ್. ಲೋಕೇಶ್, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್ ಸೋಮಶೇಖರ್ ಸೇರಿದಂತೆ ಇನ್ನಿತರರು ಇದ್ದರು.