ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ) ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
“2018-19ನೇ ಸಾಲಿನಿಂದ ಮ್ಯಾನೇಜ್‌ಮೆಂಟ್ ಕೋಟಾದಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕಗಳನ್ನು ಪಾವತಿಸಬಾರದೆಂದು ಆದೇಶಿಸಿದೆ. ಇದು ಸೂಕ್ತವಾದ ತೀರ್ಮಾನವಲ್ಲ. ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ 2019ನೇ ಸಾಲಿನಿಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರದಿಂದ ಶಿಷ್ಯವೇತನ ನಿಲ್ಲಿಸಲಾಗಿದೆ. ಇದರಿಂದ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ” ಎಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ.
“ರಾಜ್ಯದಲ್ಲಿ ಹಲವಾರು ವೃತ್ತಿಪರ ಕೋರ್ಸ್‌ಗಳು ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಆಡಳಿತ ಮಂಡಳಿ ಕೋಟಾದಲ್ಲಿಯೇ ಹೆಚ್ಚಾಗಿವೆ. ಹಾಗಾಗಿ ಈ ಕೋರ್ಸ್ ಕಲಿಯಬೇಕಾದರೆ ಅನಿವಾರ್ಯವಾಗಿ ವಿದ್ಯಾರ್ಥಿಗಳು ಖಾಸಗಿ ಕೋಟಾದಡಿಯಲ್ಲಿಯೇ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯದಿದ್ದರೆ ಈ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಕೂಡಲೇ ಈ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ದೊರೆಯುವಂತೆ ಸರ್ಕಾರ ಕ್ರಮ ವಹಿಸಬೇಕು” ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ ಆಗ್ರಹಿಸಿದರು.
“ವ್ಯಾಸಾಂಗ ಮಾಡುವ ಪ್ರತಿ ವಿದ್ಯಾರ್ಥಿಗೂ ವಿದ್ಯಾರ್ಥಿವೇತನ ಮಂಜೂರು ಮಾಡಬೇಕು. ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಕೊಡಬೇಕು. ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಲ್ಯಾಪ್‌ಟಾಪ್ ವಿತರಣೆ ಮಾಡುವ ಕಾರ್ಯ ಸ್ಥಗಿತಗೊಂಡಿದ್ದು, ಅದನ್ನು ಪುನಃ ಆರಂಭಿಸಬೇಕು. ಪ್ರತಿ ವಸತಿನಿಲಯಗಳನ್ನು ಶೈಕ್ಷಣಿಕ ಪೂರಕ ಕೆಂದ್ರವಾಗಿ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಸಂಶಿಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಆಗ್ರಹ
“ಪ್ರತಿ ವಸತಿ ನಿಲಯಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಹಾಗೂ ಬೇಸಿಕ್ ಕಂಪ್ಯೂಟರ್ ಕೋರ್ಸ್ ಮೂಲಕ ತರಬೇತಿ ನೀಡಬೇಕು. ಪ್ರತಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಇಲಾಖೆಯ ಅಧಿಕಾರಿಗಳೂ ಒಳಗೊಂಡಂತೆ ವಸತಿ ನಿಲಯ ಮೇಲುಸ್ತುವಾರಿ ಸಮಿತಿ ರಚಿಸಿ, ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು” ಎಂದರು.
“ವಸತಿ ನಿಲಯ ಮೇಲುಸ್ತುವಾರಿ ಸಮಿತಿ ಸಭೆ ಕಡ್ಡಾಯವಾಗಿ ಪ್ರತಿ ತಿಂಗಳು ನಡೆಯುವಂತೆ ನೊಡಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು. ಪ್ರಸ್ತುತ ಬೆಲೆ ಏರಿಕೆ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ವಿದ್ಯಾರ್ಥಿವೇತನದಲ್ಲಿ ಶೇ.50ರಷ್ಟು ಏರಿಕೆ ಮಾಡಬೇಕು” ಎಂದು ಆಗ್ರಹಿಸಿದರು.
ಈ ವೇಳೆ ಬೀದರ್ ತಾಲೂಕು ಸಂಚಾಲಕ ಅಶೋಕ್ ಚಲ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ ಇದ್ದರು.