2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್‌ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಇತ್ತೀಚೆಗೆ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿಸಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ನೇಮಕದ ಬಳಿಕ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಚೆನ್ನೈನಲ್ಲಿ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮೈತ್ರಿಯ ಬಗ್ಗೆ ಅಮಿತ್ ಶಾ ಘೋಷಿಸಿದ್ದಾರೆ.
“2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು (ಬಿಜೆಪಿ-ಎಐಎಡಿಎಂಕೆ) ತಮಿಳುನಾಡಿನಲ್ಲಿ 30 ಸ್ಥಾನಗಳನ್ನು ಗೆದ್ದಿತ್ತು. ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಈ ಬಾರಿಯೂ ಮೈತ್ರಿಯೊಂದಿಗೆ ಸ್ಪರ್ಧಿಸಲಿದೆ. ಮತ್ತೆ ಸರ್ಕಾರ ರಚಿಸಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.
1998ರಿಂದಲೂ ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯಲ್ಲಿವೆ. ಆದಾಗ್ಯೂ, ತಮಿಳುನಾಡಿನಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ನೆಲೆಗಾಗಿ ಬಿಜೆಪಿ ನಾನಾ ರೀತಿಯ ಕಸರತ್ತು ನಡೆಸುತ್ತಿದೆ. ಆದರೂ, ದ್ರಾವಿಡ ಹೋರಾಟದ ನೆಲೆಯಾಗಿರುವ ತಮಿಳುನಾಡು ಬಿಜೆಪಿಗೆ ಅವಕಾಶ ಕೊಡುತ್ತಿಲ್ಲ. ಕಳೆದ ವರ್ಷ (2024) ನಡೆದ ಲೋಕಸಭಾ ಚುನಾವಣೆಗೂ ಮುನ್ನ 2023ರ ಸೆಪ್ಟೆಂಬರ್‌ನಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಎಐಎಡಿಎಂಕೆ ಹೊರಬಂದಿತ್ತು. ಇದೀಗ, ಮತ್ತೆ ಎನ್‌ಡಿಎ ಭಾಗವಾಗಿದೆ.
ಇತ್ತೀಚಿನ ದಿನಗಳಲ್ಲಿ ಹಿಂದಿ ಹೇರಿಕೆ, ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಅನುದಾನ ತಡೆಯಂತಹ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ತಮಿಳುನಾಡಿನಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ನೆಲೆ ಕಂಡುಕೊಳ್ಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳಿವೆ.