ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿರುವ ಅಮಾನುಷ, ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಿ, ಆತನನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯ ಅಶೋಕನಗರದಲ್ಲಿ ಬಾಳುಬಿದ್ದ ಶೌಚಾಲಯದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಆರೋಪಿ ಪರಾರಿಯಾಗಿದ್ದಾರೆ. ಆರೋಪಿಯ ಚಲನವಲನಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯು ಬಿಹಾರ ಮೂಲದವನು ಎಂದು ಹೇಳಲಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆಸಿರುವ ಸ್ಥಳೀಯರು ಮತ್ತು ಪೋಷಕರು ಆರೋಪಿಯನ್ನು ಬಂಧಿಸಿ, ಎನ್‌ಕೌಂಟರ್ ಮಾಡಬೇಕು ಅಥವಾ ಗಲ್ಲಿಗೇರಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.
ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಕೊಡುವುದಾಗಿ ಆಮಿಷವೊಡ್ಡಿ ಆಕೆಯನ್ನು ಆರೋಪಿ ಕರೆದೊಯ್ದಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿ, ಬಾಲಕಿಯನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.