ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ
ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ 01 ಸದಸ್ಯ ಸ್ಥಾನಗಳೂ ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಎ ಮತ್ತು 308 ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಏ. 29 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 11 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮೇ 14 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕಾ ಕಾರ್ಯಗಳು ನಡೆಯಲಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22 ರಿಂದ ಮೇ 14 ರ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಪ್ರಕಟಣೆ ತಿಳಿಸಿದೆ.