ವಿವಾದಾತ್ಮಕ ನಿರ್ಧಾರದಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.
ರಾಜ್ಯಪಾಲ ಆರ್ ಎನ್ ರವಿ ಅವರ ಏಕಪಕ್ಷೀಯ ನಿರ್ಧಾರದಿಂದ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್ 14ರಂದು ಉದ್ಯೋಗಕ್ಕಾಗಿ ಲಂಚ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದರು. ಪ್ರಸ್ತುತ ಜೈಲು ಸೇರಿರುವ ಮತ್ತು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಬಾಲಾಜಿ ಅವರನ್ನು ಸ್ಟಾಲಿನ್ ಅವರು ಖಾತೆರಹಿತ ಸಚಿವರಾಗಿ ಉಳಿಸಿಕೊಂಡಿದ್ದರು. ಇದೀಗ ರಾಜ್ಯಪಾಲರು ಏಕಪಕ್ಷೀಯ ಕ್ರಮದಿಂದ ಸಚಿವ ಸ್ಥಾನದಿಂದ ವಜಾಗೊಳಿಸಿದ್ದಾರೆ.
“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
ರಾಜ್ಯಪಾಲ ಆರ್ ಎನ್ ರವಿ ಏಕಪಕ್ಷೀಯ ನಿರ್ಧಾರದಿಂದ ಆಕ್ರೋಶಗೊಂಡಿರುವ ತಮಿಳುನಾಡು ಸರ್ಕಾರ ಈ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಮಣಿಪುರ | ಸಂತ್ರಸ್ತ ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ಆಹಾರ ಸೇವಿಸಿದ ರಾಹುಲ್ ಗಾಂಧಿ
ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.
ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಬಂಧವು ಹಲವು ತಿಂಗಳುಗಳಿಂದ ಉದ್ವಿಗ್ನಗೊಂಡಿದೆ. ಸರ್ಕಾರದ ಹಲವಾರು ವಿಷಯಗಳ ಬಗ್ಗೆ ರಾಜ್ಯಪಾಲರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ, ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಶಾಸನಕ್ಕೆ ರಾಜ್ಯಪಾಲರು ಒಪ್ಪಿಗೆ ನಿರಾಕರಿಸಿದರು. ರಾಜ್ಯಪಾಲರ ನಿರ್ಧಾರದ ಬಗ್ಗೆ ಡಿಎಂಕೆ ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ಸಲ್ಲಿಸಿತ್ತು.
ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ, ನವದೆಹಲಿ ಸೇರಿದಂತೆ ಪ್ರತಿಪಕ್ಷಗಳು ಆಳ್ವಿಕೆ ನಡೆಸುವ ಇತರ ರಾಜ್ಯಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ, ರಾಜ್ಯಪಾಲರು ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳು ಪಕ್ಷಪಾತದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಆಡಳಿತ ಪಕ್ಷಗಳು ಆರೋಪಿಸಿವೆ.