ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್ 28ರಂದು ಕಂದಾಯ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾಮದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾ. ಮಹಾಂತೇಶ್ ಎಸ್ ದರಗದ ಹೇಳಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಿನ್ನಾಳ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಕಂದಾಯ ಅದಾಲತ್ ಕುರಿತು ಮಾಹಿತಿ ನೀಡಲು ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
“ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಿನ್ನಾಳ ಗ್ರಾಮವನ್ನು ದತ್ತು ಪಡೆದ ನಂತರ ಈ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ಕಿನ್ನಾಳ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್‌ನಲ್ಲಿ ‘ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ದಾಪ್ಯವೇತನ, ಅಂಗವಿಕಲರ ವೇತನ, 371(ಜೆ) ಪ್ರಮಾಣ ಪತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಉದ್ಯೋಗ ಖಾತ್ರಿ ಕಾರ್ಡ್‌ಗಳ ವಿತರಣೆ, ಜನನ ಮರಣ ಪ್ರಮಾಣ ಪತ್ರ, ಇ-ಸ್ವತ್ತಿನ ದಾಖಲಾತಿ ಹಾಗೂ ನಿರಾಪೇಕ್ಷಣ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಈ ಕಂದಾಯ ಅದಾಲತ್‌ನಲ್ಲಿ ಸಾರ್ವಜನಿಕರು ಮಾಹಿತಿ ಪಡೆಯಬಹುದಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್
“ಕಂದಾಯ ಅದಾಲತ್‌ನಲ್ಲಿ ಕೊಪ್ಪಳ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಎಡಿಎಲ್‌ಆರ್, ಆರ್‌ಐ, ವಿಎ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಕಿನ್ನಾಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಭಾಗವಹಿಸಿ ಕಂದಾಯ ಅದಾಲತ್‌ನ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಹನೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೆಶಕ ಡಾ. ಸುರೇಶ ಜಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.