ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಂದ ಮತ್ತೊಂದು ಹೊಸ ಇತಿಹಾಸ ನಿರ್ಮಾಣವಾಗಿದೆ. ಲಖನೌದ ಏಕಾನ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 40ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆ ಎಲ್ ರಾಹುಲ್ 42 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 57 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ರಾಹುಲ್ ಐಪಿಎಲ್ನಲ್ಲಿ 5000 ರನ್ ಪೂರೈಸಿದ್ದಾರೆ.
ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಕೆ ಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರ ಹೆಸರಿನಲ್ಲಿತ್ತು.
ಐಪಿಎಲ್ನಲ್ಲಿ 184 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 135 ಇನಿಂಗ್ಸ್ಗಳ ಮೂಲಕ 5000 ರನ್ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.
ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಗುತ್ತಿಗೆಯಲ್ಲಿ ಸ್ಥಾನ ಪಡೆದ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್; ಇಬ್ಬರು ಕನ್ನಡಿಗರಿಗೆ ಸ್ಥಾನ
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕೆ ಎಲ್ ರಾಹುಲ್ ಯಶಸ್ವಿಯಾಗಿದ್ದಾರೆ. ಕೇವಲ 130 ಇನಿಂಗ್ಸ್ಗಳ ಮೂಲಕ ಕೆ ಎಲ್ ರಾಹುಲ್ 5000 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 5 ಸಾವಿರ ರನ್ಗಳ ಗಡಿದಾಟಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ ಗುರಿ ತಲುಪುವ ಮೂಲಕ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.