2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ಥಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.
ತೀಸ್ತಾ ಕೂಡಲೇ ಶರಣಾಗುವಂತೆಯೂ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಪಿಗೆ ತಡೆ ಆಜ್ಞೆ ಕೋರಿದ ತೀಸ್ತಾ ಸೆಟಲ್ವಾಡ್ ಪರ ವಕೀಲರಾದ ಮಿಹಿರ್ ಥಾಕೋರೆ ಅವರ ಮನವಿಯನ್ನು ನ್ಯಾಯಾಧೀಶರು ತಳ್ಳಿಹಾಕಿದರು.
ದಂಗೆಗೆ ಸಂಬಂಧಿಸಿದಂತೆ ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.
ಗೋಧ್ರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸರು 2022ರ ಜೂನ್‌ನಲ್ಲಿ ಬಂಧಿಸಿದ್ದರು. ಅವರನ್ನು ಒಂದು ವಾರ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.