16ನೇ ವಿಧಾನಸಭೆಯ ಎರಡನೇ ದಿನದ ಅಧಿವೇಶನ ಕಲಾಪ ಮೂರನೇ ದಿನವೂ ವಿರೋಧ ಪಕ್ಷದ ನಾಯಕರಿಲ್ಲದೆ ಆರಂಭವಾಗಿದೆ. ಇದು ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎಂದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ವಿರೋಧಪಕ್ಷ ನಾಯಕರ ಆಯ್ಕೆ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇಮಕ ಸಂಬಂಧ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಮತ್ತು ಬಿಜೆಪಿ ನಾಯಕ ವಿನೋದ್ ತಾವಡೆ ಅವರು ಮಂಗಳವಾರ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
“ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಕೇಂದ್ರ ನಾಯಕರು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ. ಇಂದು ಪ್ರಧಾನಿ ಮೋದಿ, ಅಮಿತ್ ಶಾ ಅವರ ಜತೆ ಜರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗಬಹುದು. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ
ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಮೊಂಡಾಟ ಬಿಡಲಿ ಎಂದು ಹೇಳಿಕೆ ನೀಡಿದ ಸಿಎಂ ಸಿದ್ಧರಾಮಯ್ಯ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಬಿ ಎಸ್ ಯಡಿಯೂರಪ್ಪ, “ಗ್ಯಾರಂಟಿ ಅನುಷ್ಠಾನಗೊಳಿಸದೇ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.