‘ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭವಾಗಿದೆ.ಭತ್ತದ ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿಗೆ ಜಿಲ್ಲಾಡಳಿತ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪಿ.ಬಿ. ರಸ್ತೆಗೆ ಭತ್ತ ಸುರಿದು ರೈತರು ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತವು ಕೂಡಲೇ ಭತ್ತ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ರೈತರು ಇಲ್ಲಿನ ಪಿ.ಬಿ.ರಸ್ತೆಯಲ್ಲಿ ವಾಹನ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ರಚಿಸಿದ ರೈತರು, ರಸ್ತೆ ಮಧ್ಯದಲ್ಲಿ ಭತ್ತ ಸುರಿದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಲ್ ಭತ್ತದ ದರ ₹1,900 ರಿಂದ ₹1,950 ಇದ್ದು ದೂರು ಕುಸಿತವಾಗಿದೆ. ಬೆಲೆ ಕುಸಿತದಿಂದ ರೈತರಿಗೆ ನಷ್ಟ ಆಗುತ್ತಿದೆ. ಭತ್ತ ಬೆಳೆಯುವ ರೈತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಡಳಿತ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿದರು.
‘ಕ್ವಿಂಟಲ್ ಭತ್ತಕ್ಕೆ ₹2,320 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ₹500 ಪ್ರೋತ್ಸಾಹಧನ ಮಂಜೂರು ಮಾಡಿ ₹2,820ರ ದರದಲ್ಲಿ ಖರೀದಿ ಮಾಡಬೇಕು. ಏಪ್ರಿಲ್ 15ರಂದು ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಸಿ, ಖರೀದಿ ಕೇಂದ್ರ ತೆರೆಯದಿರುವ ರೈತ ವಿರೋಧಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಸಿ ಉಮಾ ಪ್ರಶಾಂತ್.
ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಮನವಿ ಸ್ವೀಕರಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಉಪವಿಭಾಗಾಧಿಕಾರಿ ಆಗಮಿಸಿ ರೈತರ ಮನವಿ ಸ್ವೀಕರಿಸಿದರು. ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಕಾರಣ ಸವಾರರು ಬೇರೆ ಮಾರ್ಗಗಳಲ್ಲಿ ಸಂಚರಿಸಿದರು.
ರೈತ ಮುಖಂಡರಾದ ತೇಜಸ್ವಿ ಪಟೇಲ್, ಬಿ.ಎಂ.ಸತೀಶ್, ಬೆಳವನೂರು ನಾಗೇಶ್ವರರಾವ್, ಧನಂಜಯ ಕಡ್ಲೇಬಾಳು, ಲೋಕಿಕೆರೆ ನಾಗರಾಜ್ ಸೇರಿದಂತೆ ಹಲವಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು