ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ, ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (ಪಿಒಕೆ) 9 ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು ಯಶಸ್ವಿಯಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿ, “ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಪ್ರಾರ್ಥಿಸಿ, ವಿಶೇಷ ಸಂಕಲ್ಪದೊಂದಿಗೆ ಪೂಜೆಗಳನ್ನು ನೆರವೇರಿಸಲು” ಸೂಚಿಸಿದ್ದಾರೆ.
