ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರ ನೀಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾರ್ಯಾಚರಣೆಯಲ್ಲಿ ನೂರು ಉಗ್ರರನ್ನು ಕೊಲ್ಲಲಾಗಿದೆ. ಕಾರ್ಯಾಚರಣೆಯು ಇನ್ನು ಮುಂದುವರಿಯುತ್ತದೆ. ಪಾಕ್ ದಾಳಿ ನಡೆಸಿದರೆ ನಾವು ಪ್ರತಿದಾಳಿ ನಡೆಸಲು ತಯಾರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ನಡೆದ ಉಗ್ರರ ದಾಳಿ ಬಳಕ ನಡೆಯುತ್ತಿರುವ ಎರಡನೇ ಸರ್ವಪಕ್ಷ ಸಭೆ ಇದಾಗಿದೆ.
ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಪರವಾಗಿ ಹಾಜರಾಗಿದ್ದರು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಿಂದ ಭಾಗವಹಿಸಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!
ಇತರ ವಿರೋಧ ಪಕ್ಷಗಳಾದ ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ, ಡಿಎಂಕೆಯ ಟಿ.ಆರ್.ಬಾಲು, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವ ಸೇನಾದ (ಯುಬಿಟ) ಸಂಜಯ್ ರಾವುತ್, ಎನ್‌ಸಿಪಿಯ (ಶರದ್ ಪವಾರ್) ಸುಪ್ರಿಯಾ ಸುಳೆ ಅವರೂ ಪಾಲ್ಗೊಂಡಿದ್ದರು.
ಜೆಡಿ(ಯು) ನಾಯಕ ಸಂಜಯ್ ಝಾ, ಎಲ್‌ಜಿಪಿ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರೂ ಸಭೆಯಲ್ಲಿದ್ದಾರೆ.
‘ಆಪರೇಷನ್ ಸಿಂಧೂರ’ದ ಕುರಿತು ಎಲ್ಲ ಪಕ್ಷಗಳಿಗೆ ಮಾಹಿತಿ ನೀಡಲು ಸರ್ಕಾರ ಬಯಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಕಾಮ್ ನಲ್ಲಿ ಉಗ್ರರು ಏಪ್ರಿಲ್ 22ರಂದು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿದೆ.