ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ನಡೆದಿದೆ.
ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ರಾಣೇಬೆನ್ನೂರು ಪಟ್ಟಣದ ನಿವಾಸಿಗಳಾದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ.
ಮೃತರನ್ನು ಫರಾನ್ ಇಮಾಮವುಲ್ಲ (27), ಉಮ್ಮೀಸಿಫಾ ಅಫ್ರಾಜ್ (16), ಅಲ್ಲಿಷಾ ಅಕ್ಬರ್ ನಾರಂಗಿ (20), ಪುಲ್ಖಾನ್ ಅಕ್ಬರ್ ನಾರಂಗಿ (20), ಉಮ್ಮೇರಾ (15) ಹಾಗೂ ಆಸೀಯಾ ಖಲಂದರ ಹೊನ್ನಾಳಿ (16) ಎಂದು ಗುರುತಿಸಲಾಗಿದೆ.
ಅಲ್ಲದೆ, ಕಾರಿನಲ್ಲಿದ್ದ ಮೇಹಕ್ (18) ಹಾಗೂ ತಸ್ಕೀನ್ (18) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬದ ಸದಸ್ಯರು ರಾಣೆಬೆನ್ನೂರಿನಿಂದ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.