ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂ.ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕರೇ ಗೌಡನಹಳ್ಳಿ ಕೆರೆ ಸಮೀಪ ಗುರುವಾರ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಮಾತನಾಡಿದರು.

ಕಾಂಗ್ರೆಸ್ ಸರಕಾರ ದೇಶಕ್ಕೆ ಅನ್ನ ಹಾಕುವ ರೈತರಿಗಾಗಿ, ರೈತನ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಮಹಾ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸೀಟುಗಳನ್ನು ಕೊಟ್ಟು ನಮ್ಮ ಸರ್ಕಾರವನ್ನು ಗೆಲ್ಲಿಸಿದ್ದೀರಿ. ಅದಕ್ಕಾಗಿ ಇದು ನಮ್ಮ ಕೊಡುಗೆ ಎಂದು ಹೇಳಿದರು.
ಎತ್ತಿನಹೊಳೆ ಯೋಜನೆಗೆ ಹಾಸನ ಭಾಗದಲ್ಲಿ ಅರಣ್ಯ ಪ್ರದೇಶ ಒತ್ತುವರಿ ವಿಚಾರದಲ್ಲಿ ತೊಡುಕಾಗಿದೆ. ಶೀಘ್ರವೇ ಎಲ್ಲಾ ತೊಡುಕುಗಳನ್ನು ಬಗೆಹರಿಸಿ, ಈ ಭಾಗಕ್ಕೆ ಎತ್ತಿನಹೊಳೆಯ ನೀರು ತರಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಬಯಲು ಸೀಮೆ ಪ್ರದೇಶಗಳಲ್ಲಿ ನೀರಿನ ಕೊರತೆ ನೀಗಿಸಲು ನಾನು ಕೇಂದ್ರದಲ್ಲಿ ಸಂಸತ್ ಸದಸ್ಯನಾಗಿದ್ದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಯೋಜನೆ ಜಾರಿಗೆ ತರಲಾಯಿತು. ವೃಷಭಾವತಿ ನೀರು ದೇವನಹಳ್ಳಿ, ದೊಡ್ಡಬಳ್ಳಾಪುರ ಭಾಗಕ್ಕೆ ಕೂಡ ಆದಷ್ಟು ಬೇಗ ಬರಲು ಡಿಪಿಆರ್ ಸಿದ್ದಪಡಿಸಿ ಪ್ರಸಕ್ತ ಸಾಲಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಎತ್ತಿನಹೊಳೆ ಯೋಜನೆಯು ಬಯಲು ಸೀಮೆ ರಾಜ್ಯಗಳ ಆಶಾ ಭಾವನೆ. ಮೊದಲು ಕುಡಿಯುವ ನೀರು ಸಿಗಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ, ನಂತರ ಕೆರೆ ತುಂಬಿಸಿ. ಒಂದು ವರ್ಷದಲ್ಲಿ ದೊಡ್ಡಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರುವ ವಿಶ್ವಾಸವಿದೆ. ಈ ಭಾಗದ ಶಾಸಕರ ಸಭೆ ಕರೆದು ಎತ್ತಿನಹೊಳೆ ಬಗ್ಗೆ ಚರ್ಚಿಸಿ, ಆದಷ್ಟು ಬೇಗ ನೀರು ಕೊಡಬೇಕು ಎಂದು ಉಪಮುಖ್ಯಮಂತ್ರಿಗಳನ್ನು ಮನವಿ ಮಾಡಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮಾತನಾಡಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರೈತರ ಬಹುದಿನಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. 2016ರಲ್ಲಿ ಕೆ.ಸಿ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಎರಡೇ ವರ್ಷಗಳಲ್ಲಿ ಉದ್ಘಾಟನೆ ಮಾಡಿ ಕೋಲಾರ ಜಿಲ್ಲೆಯ ಭಾಗದ 400 ಕೆರೆಗಳಿಗೆ ನೀರು ಹರಿಸಲಾಗಿದೆ. 2017ರಲ್ಲಿ ಹೆಚ್.ಎನ್ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ 2019ಕ್ಕೆ ಉಧ್ಘಾಟಿಸಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ನೀರು ಹರಿಸಲಾಗಿದೆ. ವೃಷಭಾವತಿ ನೀರು ಹರಿಸುವ ಯೋಜನೆಯಡಿ 270 ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು, 4 ಟಿ.ಎಂ.ಸಿ ನೀರನ್ನು ಕೆರೆಗಳಿಗೆ ಹರಿಸಲಾಗುವುದು. ಈ ಯೋಜನೆಯು ಮುಂದಿನ 2 ವರ್ಷದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸಿದ ನಂತರ ಅಂತರ್ಜಲ ಮಟ್ಟ ಹೆಚ್ಚಾಗಿ, ರೈತರು ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ. ಬರಡು ಭೂಮಿ ಈಗ ಕೃಷಿ ಭೂಮಿ ಆಗಿ ಮಾರ್ಪಾಡಾಗಿದೆ. ಇದು ರೈತರ ಪರವಾಗಿರುವ ನಮ್ಮ ಸರ್ಕಾರದ ಬದ್ಧತೆ ಎಂದರು.
ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಶಾ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.