ಮೆಟ್ರೋ 3ನೇ ಹಂತದಡಿ 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಕುರಿತು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.
2024ರ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿ.ಮೀ.ಗಳ ನೂತನ ಮಾರ್ಗಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈಗಿರುವ 7೦ ಕಿ.ಮೀ.ನ ಸಂಪರ್ಕಜಾಲವನ್ನು 176 ಕಿ.ಮೀ.ಗೆ ವಿಸ್ತರಿಸುವ ಮೂಲಕ ಮೆಟ್ರೊ ಕಾರ್ಯಾಚರಣೆಯ ಸಂಪರ್ಕ ಜಾಲವನ್ನು ಎರಡೂವರೆ ಪಟ್ಟು ಹೆಚ್ಚಿಸಲಾಗುವುದು. ಪ್ರಗತಿಯಲ್ಲಿರುವ ಏರ್‌ಪೋರ್ಟ್ ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಿ 2026 ರಲ್ಲಿ ಕಾರ್ಯಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಮೆಟ್ರೋ 3ನೇ ಹಂತದಡಿ ಅಂದಾಜು 16,328 ಕೋಟಿ ರೂ. ವೆಚ್ಚದಲ್ಲಿ ಕೆಂಪಾಪುರದಿಂದ ಜೆ.ಪಿ. ನಗರ 4ನೇ ಹಂತದವರೆಗಿನ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಓ.ಆರ್.ಆರ್. ಮಾರ್ಗವನ್ನು ಒಳಗೊಳ್ಳುವಂತಹ 45 ಕಿ.ಮೀ. ಉದ್ದದ ಮಾರ್ಗದ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. 15,000 ಕೋಟಿ ರೂ. ಅಂದಾಜು ವೆಚ್ಚದ, ಹೆಬ್ಬಾಳದಿಂದ ಸರ್ಜಾಪುರದವರೆಗಿನ 37 ಕಿ.ಮೀ. ಉದ್ದದ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ನಗರಾಭಿವೃದ್ಧಿಗೆ ಬಜೆಟ್ ಕೊಡುಗೆ
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಮೇಲ್ದರ್ಜೆಗೇರಿಸಲು
1,411 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸ್ವಂತ ಸಂಪನ್ಮೂಲದಿಂದ ಅನುಷ್ಠಾನಗೊಳಿಸಲು ಅನುಮೋದನೆ. ಮಾರ್ಚ್ 2026 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲು ಪ್ರಯಾಣಿಕರಿಗೆ ಅನಾನುಕೂಲ ಹಾಗೂ ಸಂಚಾರ ದಟ್ಟಣೆ ಸಮಸ್ಯೆಯ ನಿವಾರಣೆಗಾಗಿ 263 ಕೋಟಿ ರೂ. ವೆಚ್ಚದಲ್ಲಿ ಒಂದು ನೂತನ ಮೇಲ್ಸೇತುವೆ ನಿರ್ಮಾಣ.
- ವೈಟ್ ಟಾಪಿಂಗ್ ಯೋಜನೆ ಪುನರಾರಂಭಿಸಿ 2023-24ನೇ ಸಾಲಿನಲ್ಲಿ 800 ಕೋಟಿ ರೂ. ವೆಚ್ಚದಲ್ಲಿ 100 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ವೈಟ್ ಟಾಪ್ ರಸ್ತೆಗಳಾಗಿ ಅಭಿವೃದ್ಧಿಪಡಿಸಲಾಗುವುದು.
- ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 12 ಪ್ರಮುಖ ರಸ್ತೆಗಳನ್ನು ಹೈ ಡೆನ್ಸಿಟಿ ಕಾರಿಡಾರ್‌ಗಳೆಂದು ಗುರುತಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿ.ಮೀ. ಉದ್ದದ ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
- ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಪ್ರಕ್ರಿಯೆಯು ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಎಲ್ಲ ಕಾನೂನಾತ್ಮಕ ಸಮಸ್ಯೆ ಬಗೆಹರಿಸಿಕೊಂಡು ತ್ವರಿತವಾಗಿ ಯೋಜನೆ ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
- ಬೆಂಗಳೂರಿನಲ್ಲಿ ಮಳೆನೀರು ಸರಾಗವಾಗಿ ಹರಿಯದಿರಲು ರಾಜಕಾಲುವೆಗಳ ಒತ್ತುವರಿ ಪ್ರಮುಖ ಕಾರಣವಾಗಿದೆ. ಈ ಸಮಸ್ಯೆಯನ್ನು ನಿವಾರಿಸಲು ಕಂದಾಯ ಇಲಾಖೆ ಗುರುತಿಸಿರುವ ಒತ್ತುವರಿ ಆದ್ಯತೆ ಮೇಲೆ ತೆರವುಗೊಳಿಸಲಾಗುವುದು.
- ಬೆಂಗಳೂರು ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಬೆಂಗಳೂರು ನಗರದ 97 ಲಕ್ಷ ಟನ್‌ನಷ್ಟು ಹಳೆ ತ್ಯಾಜ್ಯವನ್ನು ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರದ ಮೂಲಕ ಸಂಸ್ಕರಿಸಲಾಗುವುದು.
- ನದಿಗಳು ಮತ್ತು ಕೆರೆಗಳಿಗೆ ಹರಿಯುವ ಮಾಲಿನ್ಯ ನಿಯಂತ್ರಿಸಲು 1,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಮತ್ತು ಇತರೇ ಪಟ್ಟಣಗಳಲ್ಲಿ 2,150 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 3,400 ಕೋಟಿ ರೂ.ಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
- ತ್ಯಾಜ್ಯ ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಹೆಚ್ಚು ವೈಜ್ಞಾನಿಕವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ವಿಲೇವಾರಿ ಮಾಡಲು ಬೆಂಗಳೂರು ಘನತಾಜ್ಯ ನಿರ್ವಹಣಾ ಸಂಸ್ಥೆಯ ಪರಿಣಾಮಕಾರಿ ಕಾರ್ಯಾಚರಣೆಗಾಗಿ 100 ಕೋಟಿ ರೂ. ಒದಗಿಸಲಾಗುವುದು.