ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟಗಳು ಹಿಂಸೆಗೆ ತಿರುಗಿದ್ದು, ಒಬ್ಬ ಅಧಿಕಾರಿ ಸೇರಿ ಒಟ್ಟು 12 ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮುರ್ಶಿದಾಬಾದ್ ಜಿಲ್ಲೆಯ ರೇಜಿನಗರ್, ತುಫಾನ್‌ಗಂಜ್, ಖರ್‌ಗ್ರಾಮ್‌ನಲ್ಲಿ ಮತದಾನ ಪ್ರಕ್ರಿಯೆ ಶುರುವಾಗುವ ಮುನ್ನವೇ ಐವರು ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ದೋಮ್‌ಕೋಲ್ ಎಂಬಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
“ಶುಕ್ರವಾರ ತಡರಾತ್ರಿಯಿಂದ ಬಿಜೆಪಿ ಮತ್ತು ಸಿಪಿಐಎಂ ಪಕ್ಷಗಳ ಕಾರ್ಯಕರ್ತರೇ ಈ ಹಿಂಸಾಚಾರ ನಡೆಸುತ್ತಿದ್ದಾರೆ. ನಮ್ಮ ಕಾರ್ಯಕರ್ತರನ್ನು ಹತ್ಯೆಗೈದು ಮತಗಟ್ಟೆಗಳನ್ನು ಧ್ವಂಸ ಮಾಡಿದ್ದಾರೆ. ಬ್ಯಾಲೆಟ್ ಪೇಪರ್‌ಗಳನ್ನು ಸುಟ್ಟು ಹಾಕಲಾಗಿದೆ. ಭದ್ರತಾ ಸಿಬ್ಬಂದಿ ಮತಗಟ್ಟೆಗಳಿಗೆ ಅಗತ್ಯ ಭದ್ರತೆ ಒದಗಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆಡಳಿತಾರೂಢ ಟಿಎಂಸಿ ಆರೋಪಿಸಿದೆ.
ಕೂಚ್ ಬೆಹಾರ್ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಬೂತ್ ಏಜೆಂಟ್ ಮಾಧವ್ ಬಿಸ್ವಾಸ್ ಎಂಬುವವರನ್ನು ಟಿಎಂಸಿ ಕಾರ್ಯಕರ್ತರು ತಡೆದಿದ್ದಾರೆ. ಇದರಿಂದ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಇದೇ ಸಂದರ್ಭದಲ್ಲಿ ಮಾಧವ್ ಬಿಸ್ವಾಸ್ ಅವರನ್ನು ಥಳಿಸಿ ಕೊಲೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಓರ್ವ ಸಿಪಿಐಎಂ ಬೆಂಬಲಿಗನನ್ನು ಕೂಡ ಹತ್ಯೆ ಮಾಡಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಮೂರು ಹಂತಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. 73, 887 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ನಾನಾ ಪಕ್ಷಗಳ 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ರಾಜ್ಯದಲ್ಲಿ ನಡೆದ ರಾಜಕೀಯ ಪ್ರೇರಿತ ಹಿಂಸಾಚಾರಕ್ಕೆ ಈವರೆಗೆ 23 ಜನ ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚುನಾವಣೆಗಳು ಮತಪತ್ರಗಳ ಮೂಲಕ ನಡೆಯಬೇಕೇ ಹೊರತು ಬುಲೆಟ್‌ಗಳಿಂದ ಅಲ್ಲ ಎಂದು ಪಂಚಾಯತ್ ಚುನಾವಣೆ ವೇಳೆ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಹೇಳಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.