ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಜನಪರವಾಗಿದೆ. ಎಲ್ಲ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಸಮಾನವಾಗಿ ಆಯವ್ಯಯ ಮಂಡಿಸಿದ್ದಾರೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗಾಗಿ ಒಂದು ಕೋಟಿ ಶ್ರೇಯಾಭಿವೃದ್ಧಿಗೆ ಮೀಸಲಿಟ್ಟಿದ್ದಾರೆ. ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎನಲ್ಲಿ ಬರುವ ಗುತ್ತಿಗೆದಾರರಿಗೆ ಒಂದು ಕೋಟಿ ರೂ. ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ನೀಡಲಾಗಿದೆ. ಸರ್ಕಾರದ ನಿರ್ಧಾರಗಳು ಜನಪರವಾಗಿವೆ ಎಂದು ಅಖಿಲ ಕರ್ನಾಟಕ ಡಾ ಜಿ ಪರಮೇಶ್ವರ್ ಯುವ ಸೈನ್ಯದ ಮುಖಂಡ ಮಲ್ಲಿಕಾರ್ಜುನ್ ಆರಬೋಳ ಹೇಳಿದ್ದಾರೆ.
“ಎಲ್ಲ ಇಲಾಖೆಗಳನ್ನು ಒಳಗೊಂಡಂತೆ ಶಿಕ್ಷಣ, ಕಂದಾಯ, ಪಂಚಾಯತ್ ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಅನೇಕ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಎಲ್ಲ ವರ್ಗದ ಜನರಿಗೆ ಅನುಕೂಲಕರವಾಗಿದೆ” ಎಂದು ಅವರು ತಿಳಿಸಿದ್ದಾರೆ.
“ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಪೂರಕವಾದ ಬಜೆಟ್ ಇದಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಎಂಬ ಧ್ಯೇಯ ವಾಕ್ಯದಿಂದ, ಜನರ ಹಿತದೃಷ್ಟಿಯನ್ನು ಬಜೆಟ್ ಒಳಗೊಂಡಿದೆ” ಎಂದು ಅವರು ಹೇಳಿದ್ದಾರೆ.