ಬೆಂಗಳೂರಿನಲ್ಲಿ ಜುಲೈ 17 ಮತ್ತು 18 ರಂದು ನಡೆಯಲಿರುವ ವಿಪಕ್ಷಗಳ ಮುಂದಿನ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಬದಲಾವಣೆಗಾಗಿ ನಡೆಯಲಿರುವ ಮಹಾನ್ ಆಂದೋಲನಕ್ಕೆ ಸೇರಲು ಬಯಸುವ ಎಲ್ಲ ನಾಯಕರನ್ನು ನಾವು ಸ್ವಾಗತಿಸುತ್ತೇವೆ. ಈಗಾಗಲೇ ಘೋಷಿಸಿರುವಂತೆ ಜುಲೈ 17 ಮತ್ತು 18ರಂದು ದೇಶದ ವಿರೋಧ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಭಾಗವಹಿಸುವಂತೆ ಮನವಿ ಮಾಡಿದ್ದೇವೆ. ಈ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಸಂದೇಶ ನಮಗೆ ಬಂದಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿಯ ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆ
ರಾಹುಲ್ ಅನರ್ಹತೆ ವಿರುದ್ಧ ಪ್ರತಿಭಟನೆ
“ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಜುಲೈ 12 ರಂದು ಎಲ್ಲ ರಾಜ್ಯ ಕೇಂದ್ರ ಕಚೇರಿಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷವು ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ನಾನು ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಆದರೆ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಅವರ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿಯನ್ನು ನಾವು ಖಂಡಿಸುತ್ತೇ ವೆ” ಎಂದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರದ ಷಡ್ಯಂತ್ರದ ವಿರುದ್ಧದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿಯವರ ಮೋದಿ ಉಪನಾಮದ ಟೀಕೆಗಳ ಮೇಲಿನ 2019 ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರ ಅನರ್ಹತೆ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.