ನಾಳೆ (ಮೇ17) ದಂದು ಬೀದರ್ ರೈಲ್ವೆ ನಿಲ್ದಾಣದಲ್ಲಿ ಮಾಕ್ ಡ್ರಿಲ್ (ಅಣಕು ಪ್ರದರ್ಶನ) ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಳೆ ನಡೆಯುವ ಮಾಕ್ ಡ್ರಿಲ್ (ಅಣಕು ಪ್ರದರ್ಶನ) ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ 9 ಕಡೆಗಳಲ್ಲಿ ಭಾರತ ನಿಖರ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇನ್ನಷ್ಟು ಇಂತಹ ದಾಳಿ-ಪ್ರತಿದಾಳಿ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲು ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅದರಂತೆ ಬೀದರ್ ರೈಲ್ವೆ ನಿಲ್ದಾಣದಲ್ಲಿ ನಾಳೆ ಸಂಜೆ 4:30 ರಿಂದ 5:30ರವರೆಗೆ ಅಣಕು ಪ್ರದರ್ಶನ ನಡೆಯಲಿದೆ’ ಎಂದರು.
‘ಮಾಕ್ ಡ್ರಿಲ್‍ಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಮಾಕ್ ಡ್ರಿಲ್ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡಬಾರದು’ ಎಂದರು.
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಬೀದರ ಉಪವಿಭಾಗಾಧಿಕಾರಿ ಎಂ.ಡಿ. ಶಕೀಲ್, ಕೆಕೆಆರ್‌ಟಿಸಿ ವಿಭಾಗಿಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಪುಲೇಕರ , ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಶಸ್ತ್ರ ಚಿಕಿತ್ಸಾ ಅಧಿಕಾರಿ ಅಹಮದ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಎಮ್.ಡಿ ಮುಜಾಮಿಲ್ ಪಟೇಲ್, ಜಿಲ್ಲಾ ಗೃಹರಕ್ಷಕ ದಳದ ಅಧಿಕಾರಿ ಮನೋಜಕುಮಾರ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ ವಿಶ್ವವಿದ್ಯಾಲಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಡಿ : ಶಿವಯ್ಯ ಸ್ವಾಮಿ