ಉತ್ತರ ಭಾರತದ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಲವು ಸಾವುನೋವುಗಳ ಜೊತೆಗೆ ಜನ ಜೀವನ ಕೂಡ ಅಸ್ತವ್ಯಸ್ತವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಮಳೆಗೆ ಯಮುನಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಕೇಂದ್ರ ಜಲ ಆಯೋಗ ಹೈಅಲರ್ಟ್ ಘೋಷಿಸಿದೆ.
ಯಮುನಾ ನದಿಯು 205.33 ಮೀಟರ್ಗಳನ್ನು ದಾಟಿ ಈಗ 206.24 ಮೀಟರ್ ಏರಿಕೆಯಾಗಿದೆ. ನದಿಯ ಗರಿಷ್ಠ ಮಟ್ಟ 207.49 ಮೀಟರ್. ಸೋಮವಾರ ಸಂಜೆ ಯಮುನಾ ಪ್ರವಾಹ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಯಿತು. ಯಮುನಾ ನದಿಯ ಮೇಲಿರುವ ಹಳೆ ರೈಲು ಸೇತುವೆಯ ಮೇಲಿನ ರೈಲು ಸಂಚಾರವನ್ನು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಯಮುನಾ ನದಿಯ ನೀರಿನ ಮಟ್ಟದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯ ಅನಾಹುತಕ್ಕೆ 30ಕ್ಕೂ ಹೆಚ್ಚು ಸಾವು
ಕಳೆದ ಕೆಲ ದಿನಗಳಲ್ಲಿ ಮಳೆಯ ಅನಾಹುತಗಳಿಗೆ ಉತ್ತರ ಭಾರತದ ರಾಜ್ಯಗಳಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಈ ಸುದ್ದಿ ಓದಿದ್ದೀರಾ? ಮೂತ್ರ ವಿಸರ್ಜನೆ ವಿವಾದ: ಮಧ್ಯಪ್ರದೇಶ ಸಿಎಂ ಬೇರೆ ವ್ಯಕ್ತಿಯ ಪಾದ ತೊಳೆದರೆ?
ಹಿಮಾಚಲ ಪ್ರದೇಶದ ಪ್ರವಾಸಿ ಪಟ್ಟಣವಾದ ಮನಾಲಿಯಲ್ಲಿ ಸಿಲುಕಿದ್ದ 20 ಜನರನ್ನು ರಕ್ಷಿಸಲಾಗಿದೆ. ಆದರೆ ಸೋಮವಾರ ಮೂರನೇ ದಿನವೂ ಭಾರೀ ಮಳೆಯಿಂದಾಗಿ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 300 ಮಂದಿ ಸಿಲುಕಿಕೊಂಡಿದ್ದಾರೆ. ಭಾನುವಾರ ಸುರಿದ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ ಮತ್ತು ಸಾವು ನೋವುಗಳು ಉಂಟಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಕಾರಣ ಇಂದು ಸಹ “ರೆಡ್ ಅಲರ್ಟ್” ಘೋಷಿಸಲಾಗಿದೆ.
ಭಾರೀ ಮಳೆಯಿರುವ ಕಾರಣ ವಿಶೇಷವಾಗಿ ನದಿಗಳು ಮತ್ತು ನಾಲೆಗಳ ಬಳಿ ಜನರು ಹೋಗಬಾರದು ಮತ್ತು ಮುಂದಿನ 24 ಗಂಟೆಗಳ ಕಾಲ ತೀವ್ರ ಎಚ್ಚರಿಕೆ ವಹಿಸುವಂತೆ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸುವಂತೆ ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಳೆ ಪೀಡಿತ ರಾಜ್ಯಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.