ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕರು ಬುಧವಾರ ಮೌನ ಪ್ರತಿಭಟನೆ ನಡೆಸಿದರು.
ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮುಖಂಡರು ಭಾಗಿಯಾಗಿದ್ದಾರೆ.
ಸಚಿವರಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ ಆರ್ ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಧರಣಿ ಕುಳಿತಿದ್ದಾರೆ.
ಘಟನೆ ಹಿನ್ನೆಲೆ
“ಮೋದಿ ಉಪನಾಮ ಹೊಂದಿದವರೆಲ್ಲ ಕಳ್ಳರು” ಎಂಬ ಹೇಳಿಕೆ ಸಂಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೇಲೆ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ಕೋರಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ (ಜುಲೈ 7) ತಿರಸ್ಕರಿಸಿತ್ತು.
ಈ ಮೂಲಕ ರಾಹುಲ್ ಅವರ ಲೋಕಸಭೆ ಸದಸ್ಯತ್ವದ ಅನರ್ಹತೆ ಮುಂದುವರಿಯುವಂತಾಗಿದೆ. ರಾಹುಲ್ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಅವರು ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2ರಂದೇ ವಿಚಾರಣೆ ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿದ್ದರು. ಮಧ್ಯಂತರ ಪರಿಹಾರದ ಆದೇಶ ನೀಡಲು ನಿರಾಕರಿಸಿದ್ದರು. ಬೇಸಿಗೆ ರಜೆ ಮುಗಿದ ಬಳಿಕವೇ ಆದೇಶ ಪ್ರಕಟಿಸುವುದಾಗಿ ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಿದೆ. “ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ” ಎಂದು ಹೈಕೋರ್ಟ್ ಹೇಳಿತ್ತು.
ರಾಹುಲ್ ಅವರು 2019ರಲ್ಲಿ ಕೋಲಾರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆ ವೇಳೆ “ಮೋದಿ ಉಪನಾಮ ಹೊಂದಿರುವವರೆಲ್ಲಾ ಕಳ್ಳರು” ಎಂದು ಹೇಳಿದ್ದರು. ಪ್ರಕರಣ ಸಂಬಂಧ ಗುಜರಾತ್ ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ರಾಹುಲ್ ಗಾಂಧಿಯವರಿಗೆ 2023ರ ಮಾರ್ಚ್ 23 ರಂದು 2 ವರ್ಷಗಳ ಶಿಕ್ಷೆ ವಿಧಿಸಿತ್ತು. ಬಳಿಕ ರಾಹುಲ್ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.