ಎಪಿಎಂಸಿ ಅಧಿನಿಯಮ 1966ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು ಎಂದು ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರು ನಿಯಮ 72 ರಡಿ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವ ಶಿವಾನಂದ ಪಾಟೀಲ ಉತ್ತರಿಸಿದರು.
ಹಿಂದಿನ ಸರ್ಕಾರದಲ್ಲಿ ತರಲಾಗಿದ್ದ ಎಪಿಎಂಸಿ ಕಾಯ್ದೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ಮಾರುಕಟ್ಟೆ ಪ್ರಾಂಗಣಗಳ ಹೊರಗಡೆ ಮಾರುಕಟ್ಟೆ ಕ್ಷೇತ್ರದಲ್ಲಿ ನಡೆಯುವ ವ್ಯಾಪಾರ ವಹಿವಾಟಿನ ಮೇಲೆ ಈ ಮೊದಲಿನಂತೆ ನಿಯಂತ್ರಣವನ್ನು ಹೊಂದುವುದು ರೈತ ಬೆಳೆಗಾರರ ಹಿತದೃಷ್ಟಿಯಿಂದ ಅವಶ್ಯಕತೆ ಇದೆ ಎಂದರು.
ಈ ಸುದ್ದಿ ಓದಿದ್ದೀರಾ? ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
ಆದ್ದರಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966ರ ಕಲಂ 8(2), ಕಲಂ 8(3) ಹಾಗೂ ಕಲಂ 117ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲು ಇದೇ ಜೂನ್ 16 ರಂದು ನಡೆದ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಮುಂದಿನ ಕ್ರಮಕ್ಕಾಗಿ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.