ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನ ವತಿಯಿಂದ ಕೊಡಗು ಜಿಲ್ಲೆ, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ‘ ನಮ್ಮ ಶಾಲೆ ನಮ್ಮ ಹೆಮ್ಮೆ ‘ ವಿನೂತನ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣಾ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಯ್ಯ ಕರೆ ಕೊಟ್ಟರು.
” ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ, ಶಾಲಾಭಿವೃದ್ಧಿ ಹಾಗೂ ಬಲವರ್ಧನೆಗಾಗಿ ಸರ್ಕಾರ ರೂಪಿಸಿರುವ ‘ ನಮ್ಮ ಶಾಲೆ ನಮ್ಮ ಜವಾಬ್ದಾರಿ ‘ ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶ್ರೋಯೋಭಿವೃದ್ಧಿಗಾಗಿ ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಪೋಷಕರು, ನಾಗರಿಕರು ಹಾಗೂ ದಾನಿಗಳು ಹೆಚ್ಚಿನ ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕು ” ಎಂದರು.
” ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಸರ್ಕಾರದ ಕನಸಿನ ಕ್ರಾಂತಿಕಾರಕ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ.ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು.
ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಸಮುದಾಯ ಸಹಭಾಗಿತ್ವದಲ್ಲಿ ಶಾಲಾ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾಭಿವೃದ್ಧಿಗೆ ಸಹಕಾರಿಯಾಗಲಿದೆ ” ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ ” ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವಂತೆ ” ಮನವಿ ಮಾಡಿದರು.
ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್ ಮಾತನಾಡಿ ‘ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ, ಹಾಲು, ಬಾಳೆಹಣ್ಣನ್ನು ಒಳಗೊಂಡ ಬಿಸಿಯೂಟದೊಂದಿಗೆ ಹಸಿವಿನಿಂದ ಬಳಲದಂತೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಗಮನ ಹರಿಸಲಾಗುತ್ತಿದೆ ‘ ಎಂದರು.
ಈ ಸುದ್ದಿ ಓದಿದ್ದೀರಾ? ಕೊಡಗು | ‘ ಭದ್ರ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ
ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ, ತಾಲ್ಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಜಿ.ಎಂ.ಹೇಮಂತ್, ಬಾಲಕಿಯರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಪಿ.ನವೀನ್ ಕುಮಾರ್, ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ಜೆ. ನಾಗರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲ ಪರಮೇಶ್ವರಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಡಾ.ಸದಾಶಿವಯ್ಯ ಎಸ್. ಪಲ್ಲೇದ್, ಸಿ ಆರ್ ಪಿ ವಿಶ್ವನಾಥ್, ಕುಶಾಲನಗರ ಪಿಎಂಶ್ರೀ ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಜೆ.ಸಿ.ಐ.ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಎಂ.ಜೆ. ರಜನೀಕಾಂತ್, ಚಿಂತನ ಫೌಂಡೇಶನ್ ನ ಸ್ವಯಂ ಸೇವಕ ಸುನಂದಕುಮಾರ್, ಕೂಡಿಗೆ ಗೋವಿಂದರಾಜ್, ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಪೋಷಕರು, ನಾಗರಿಕರು ,ಶಾಲಾ ಶಿಕ್ಷಕರು ಇದ್ದರು.