ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಚಲನೆಯಾಗುತ್ತಿರುವ ಕಾರಣ, ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮೇ 27 ಮತ್ತು 28ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಳೆದ 4 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಂಗಳೂರಿನ ಪಂಪ್‌ವೆಲ್ ಮೇಲುರಸ್ತೆಯಲ್ಲಿ ಕೆಳಭಾಗ ಸಂಪೂರ್ಣ ಜಲಾವೃತವಾಗಿದೆ. ಕೊಡಿಯಾಲ್ ಬೈಲ್ ಭಗವತಿ ನಗರವು ದ್ವೀಪದಂತೆ ಮಾರ್ಪಟ್ಟಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನು, ಮೈಸೂರು ಜಿಲ್ಲೆಯಲ್ಲಿಯೂ ನಿರಂತರವಾಗಿ ಸಣ್ಣ ಪ್ರಮಾಣದ ಮಳೆಯಾಗುತ್ತಿದ್ದು, ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮಂಗಳವಾರ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶಿಸಿದ್ದಾರೆ.